ಫಲಾನುಭವಿಗಳನ್ನು ಕರೆದೊಯ್ಯಲು ಸಿದ್ಧತೆ ಕೈಗೊಳ್ಳಿ

28chn5
Published on

ಚಾಮರಾಜನಗರ: ಮೈಸೂರಿನಲ್ಲಿ ಆ.30ರಂದು ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಚಾಲನೆಯ ಬೃಹತ್ ಸಮಾರಂಭಕ್ಕೆ ಜಿಲ್ಲೆಯಿಂದ ಫಲಾನುಭವಿಗಳನ್ನು ಕರೆದೊಯ್ಯಲು ಕೈಗೊಂಡಿರುವ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೋಮವಾರ ಪರಿಶೀಲಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಅನುಷ್ಠಾನ ಕುರಿತು ಜಿಲ್ಲಾ, ತಾಲೂಕು ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಜೂಮ್ ಸಭೆಯ ಮೂಲಕ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

ಈಗಾಗಲೇ ನೇಮಕವಾಗಿರುವ ತಾಲೂಕು, ಹೋಬಳಿ ಹಾಗೂ ಇನ್ನಿತರ ವಿವಿಧ ಹಂತದ ನೋಡಲ್ ಅಧಿಕಾರಿಗಳು ಫಲಾನುಭವಿಗಳನ್ನು ಕರೆತರುವ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ನಿಗದಿತ ಸಮಯಕ್ಕೆ ಬಸ್‌ಗಳು ಬರಲಿದ್ದು, ಕಾರ್ಯಕ್ರಮದ ವೇಳೆಗೆ ಫಲಾನುಭವಿಗಳು ಭಾಗವಹಿಸಲು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಫಲಾನುಭವಿಗಳಿಗೆ ಉತ್ತಮ ಉಪಾಹಾರ, ಊಟ, ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ಗ್ರಾಮ ಪಂಚಾಯಿತಿವಾರು ಬಸ್‌ಗಳಿಗೆ ನೇಮಕವಾದ ಅಧಿಕಾರಿ ಹಾಗೂ ಸಿಬ್ಬಂದಿ ಫಲಾನುಭವಿಗಳಿಗೆ ಬಸ್ ಬರುವ ಹಾಗೂ ಹೊರಡುವ ಸಮಯದ ಮಾಹಿತಿಯನ್ನು ತಿಳಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶವಾಗದ ರೀತಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಫಲಾನುಭವಿಗಳನ್ನು ಕರೆತರುವ ಬಸ್‌ಗಳ ಮಾರ್ಗಗಳ ಮಾಹಿತಿ ಒಳಗೊಂಡ ರೂಟ್‌ಮ್ಯಾಪ್ ಪ್ರಕಾರ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಬಸ್‌ಗಳ ನಿಲುಗಡೆ ಸ್ಥಳ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗೀತಾ ಲಕ್ಷ್ಮೀ, ಕೆಎಸ್‌ಆರ್‌ಟಿಸಿ, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರ್‌ಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು, ಆಯುಕ್ತರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net