ಯಾತ್ಮಕ ಚಿಂತನೆಗೆ ಕ್ರೀಡೆ ಸಹಕಾರಿ

01raju1
Published on

ಚಾಮರಾಜನಗರ : ಸರ್ಕಾರಿ ಶಾಲೆಯ ಶಿಕ್ಷಕರು ಕೇವಲ ಬೋಧನೆಗೆ ಮಾತ್ರ ಸೀಮಿತವಾಗದೆ, ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಕರು ವರ್ಷದ 365 ದಿನಗಳಲ್ಲೂ ಶಾಲೆ, ಬೋಧನೆ, ಇಲಾಖೆಯ ಕೆಲಸ ಹಾಗೂ ತಮ್ಮದೇ ಆದ ಒತ್ತಡದಲ್ಲಿ ಇರುತ್ತಾರೆ. ಕ್ರೀಡೆ, ಸಹಪಠ್ಯ ಚಟುವಟಿಕೆ ಹಾಗೂ ವಿವಿಧ ಸಾಂಸ್ಕೃತಿಕ ಪ್ರತಿಭೆ ಅನಾವರಣಕ್ಕೆ ಅವಕಾಶ ಕಡಿಮೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಶಿಕ್ಷಕರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ. ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳಲು, ಕ್ರಿಯಾತ್ಮಕ ಚಿಂತನೆಗೆ ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ತಿಳಿಸಿದರು.

ಹಲವಾರು ಶಿಕ್ಷಕರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ನಾವು ಬೊಧನೆ ಮಾಡಲು ಮಾತ್ರ ಸೀಮಿತವಲ್ಲ ಎಂದು ತೋರಿಸಿದ್ದಾರೆ. ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುವ ಮೂಲಕ ಕ್ರೀಡಾಕೂಟಕ್ಕೆ ಮೆರುಗು ತನ್ನಿ. ಈ ಕ್ರೀಡಾಕೂಟಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡುವುದಿಲ್ಲ. ಆದರೂ ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರು ವಿಶಾಲ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ನಿರಂತರ ಅಭ್ಯಾಸವನ್ನು ಮುಂದುವರಿಸಿ ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಲಾಲಿಂಗಸ್ವಾಮಿ, ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಶಂಕರ್, ತಾಲೂಕು ಉಪಾಧ್ಯಕ್ಷ ರಾಮಸ್ವಾಮಿ, ಕಿರಣ್‌ರಾಜ್, ಮಂಜುಳಾ, ರಾಜು, ಮಲ್ಲಿಕಾರ್ಜುನ್, ರಾಮಸ್ವಾಮಿ, ನೇಮಿರಾಜ್, ರಂಗಸ್ವಾಮಿ, ಸುಧಾ, ಗೀತಾ, ಭರತ್‌ಭೂಷಣ್, ನಟರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

ಶಿಕ್ಷಕರಿಗೆ ಇಲಾಖೆಯಲ್ಲಿ ಸಾಕಷ್ಟು ಒತ್ತಡ ಇದೆ, ಶಿಕ್ಷಕರು ಶಾಲೆ ಬಿಟ್ಟು ಬರುತ್ತೇವೆ ಅಂದರೆ ಕಷ್ಟವಾಗುತ್ತದೆ. ವಿಶೇಷವಾಗಿ ಈ ಬಾರಿಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದೇವೆ. ಪ್ರತಿಯೊಬ್ಬರಿಗೂ ಕ್ರೀಡೆ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬ ಶಿಕ್ಷಕರು ಸಾಮರಸ್ಯದಿಂದ ಭಾಗವಹಿಸಿ ಸೆ.5 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯನ್ನು ಯಶಸ್ವಿಗೊಳಿಸೋಣ.ಮಾದಪ್ಪ, ಜಿಲ್ಲಾಧ್ಯಕ್ಷ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಚಾಮರಾಜನಗರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net