

ಚಾಮರಾಜನಗರ : ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಗಿರವಿ ಇಟ್ಟಿರುವ ಚಿನ್ನವನ್ನು ಬಿಡಿಸಿಕೊಡಲು ಜಿಲ್ಲಾಡಳಿತ ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಸೆ.4 ರಿಂದ ಜಿಲ್ಲಾಡಳಿತ ಭವನದ ಮುಂಭಾಗ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕಬ್ಬು ಬೆಳೆಗಾರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಚಿನ್ನವನ್ನು ಗಿರವಿ ಇಟ್ಟುಕೊಳ್ಳಲು ಅವಕಾಶ ಇಲ್ಲ. ಹೀಗಿದ್ದರೂ ಸಹಕಾರದ ಸಂಘದ ಆಡಳಿತ ಮಂಡಳಿಯು ಈ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರಿಂದ ಚಿನ್ನವನ್ನು ಅಡವಿಟ್ಟುಕೊಂಡು ಸಾಲ ನೀಡಿದೆ. ರೈತರು ಸಾಲ ಹಿಂದಿರುಗಿಸಿದರೂ ಚಿನ್ನವನ್ನು ಕೊಡುತ್ತಿಲ್ಲ. ಆ ಚಿನ್ನವನ್ನು ಖಾಸಗಿ ಬ್ಯಾಂಕ್‌ಗಳಲ್ಲಿ ಇಟ್ಟು ಹೆಚ್ಚಿನ ಹಣ ಪಡೆದು ರೈತರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.
ರೈತರು ಗಿರವಿ ಇಟ್ಟಿರುವ ಚಿನ್ನವನ್ನು ಬಿಡಿಸಿಕೊಡುವಂತೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈ ನಡುವೆ ಜಿಲ್ಲಾಧಿಕಾರಿಗಳು ಕಬ್ಬು ಬೆಳೆಗಾರರ ಸಭೆ ಕರೆದು ರೈತರ ಚಿನ್ನ ಬಿಡಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ತಿಂಗಳು ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ. ಈ ವಿಳಂಬ ಧೋರಣೆ ಖಂಡಿಸಿ ಸೆ.4 ರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಿರಂತರ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ಮೂಕಹಳ್ಳಿ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು, ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ಹೆಗ್ಗೋಠಾರ ಶಿವಸ್ವಾಮಿ, ಬಸವರಾಜಪ್ಪ, ಮಹೇಂದ್ರ, ಮಂಜುನಾಥ್, ರಾಜು, ರೇವಣ್ಣ ಇತರರು ಹಾಜರಿದ್ದರು.