ಶಿಕ್ಷಕರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ

05 HANUR 1 A
Published on

ಹನೂರು: ಪಟ್ಟಣದಲ್ಲಿ ಶಿಕ್ಷಕರ ಭವನ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದರು.
ಸಮೀಪದ ಆರ್.ಎಸ್.ದೊಡ್ಡಿ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹನೂರು ಭಾಗ ಬಹುತೇಕ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಇಲ್ಲಿನ ಶಾಲೆಗಳಿಗೆ ಶಿಕ್ಷಕರು ತೆರಳಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಹನೂರಿನಲ್ಲಿ ಗುರುಭವನ ಇಲ್ಲದಿರುವುದು ವಿಪರ್ಯಾಸ. ಈ ಭಾಗದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಕಳೆದ 5 ವರ್ಷಗಳಿಂದಲೂ ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆಯುತ್ತಾ ಬಂದಿದೆ. ಇದು ಹೀಗೆಯೇ ಮುಂದುವರಿಯಬೇಕು. ಪ್ರತಿಯೊಂದು ಶಾಲೆಯಲ್ಲೂ ಸ್ಮಾರ್ಟ್‌ಕ್ಲಾಸ್ ಆರಂಭವಾಗಬೇಕಿದೆ. ಪ್ರತಿ ಶಾಲೆಗೂ ಖುದ್ದಾಗಿ ಭೇಟಿ ನೀಡಿ ಮೂಲಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಶಿಕ್ಷಕರಿಗೆ ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಶೈಕ್ಷಣಿಕ ವಲಯದಲ್ಲಿರುವ ಸಮಸ್ಯೆಗಳನ್ನು ಈಡೇರಿಸುವಂತೆ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಗ್‌ಬಾಸ್ ಖ್ಯಾತಿಯ ಪ್ರಥಮ್ ಬಂಡಳ್ಳಿ ರಸ್ತೆ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು.

ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳನ್ನು ಅಭಿನಂದಿಸಲಾಯಿತು. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಬಿಇಒ ಶಿವರಾಜು, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಫ್ರಾನ್ಸಿಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿಯನಾಯಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಅಮಲ್‌ದಾಸ್, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹದೇವ, ಶಿಕ್ಷಣ ಸಂಯೋಜಕ ಕಿರಣ್‌ಕುಮಾರ್, ಕಂದವೇಲು, ಚಿನ್ನಪ್ಪಯ್ಯ, ವಿವಿಧ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net