

ಚಾಮರಾಜನಗರ : ವಿದ್ಯಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯದ ಬಗ್ಗೆ ಅರಿವು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಸಲಹೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿಡಿಪಿಐ ಸಭಾಂಗಣದಲ್ಲಿ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಏಡ್ಸ್ ನಿಯಂತ್ರಣ ಘಟಕದ ಸಹಯೋಗದಲ್ಲಿ 2023-24 ನೇ ಸಾಲಿನ ಯುವಜನೋತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಕ್ವಿಜ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದೇಶದಲ್ಲಿರುವ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಮುಂದಿದ್ದಾರೆ. ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ. ಆರೋಗ್ಯ ಸಮಸ್ಯೆಗಳು ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಸುಮಾರು 50 ಶಾಲೆಗಳಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ರಸಪ್ರಶ್ನೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ಈಗಾಗಲೇ ನೀವು ಉತ್ತಮ ವಿದ್ಯಾರ್ಥಿಗಳು ಎಂದು ಆಯ್ಕೆ ಮಾಡಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸುವುದರ ಜತೆಗೆ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಬೆಳೆಸಿಕೊಳ್ಳಿ ಎಂದು ತಿಳಿಸಿದರು.
ಜಿಲ್ಲಾ ಕ್ಷಯರೋಗ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್ ಮಾತನಾಡಿ, ಮಕ್ಕಳಿಗೆ ಉತ್ತಮವಾದ ಆರೋಗ್ಯ ನೀಡುವುದು ನಮ್ಮ ಕರ್ತವ್ಯವಾಗಿದೆ. ರೋಗಗಳ ಬಗ್ಗೆ ಅರಿವಿದ್ದರೆ ಅದನ್ನು ನಿಯಂತ್ರಿಸಲು ಯಾವುದೇ ಸಮಸ್ಯೆಯಾಗುವುದಿಲ್ಲ. ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಬಹುಮುಖ್ಯವಾಗಿದೆ ಎಂದರು.
ಯುವಜನೋತ್ಸವ ಅಂಗವಾಗಿ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಿತ್ತೂರು ರಾಣಿ ವಸತಿ ಶಾಲೆ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಇನ್ನಿತರೆ ವಸತಿ ಶಾಲೆಗಳು ಹಾಗೂ ಸರ್ಕಾರಿ ಪ್ರೌಢಶಾಲೆ ಹಾಗೂ ಖಾಸಗಿ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಮಲ್ಲಿಕಾರ್ಜುನ, ಲಕ್ಷ್ಮೀ, ಮಹದೇವಸ್ವಾಮಿ, ಪಿ.ಶಂಕರ್, ಗಿರೀಶ್ ಹಾಗೂ ಇತರರು ಉಪಸ್ಥಿತರಿದ್ದರು.