

ಚಾಮರಾಜನಗರ: ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಗೆ ಹೆಚ್ಚಿನ ಗಮನಹರಿಸಿ ಎಂದು ಎಸ್.ಪಿ.ಬಾಲಸುಬ್ರಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ಶಿವು ಸಲಹೆ ನೀಡಿದರು.
ತಾಲೂಕಿನ ಚೆನ್ನಿಪುರಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ‘ಸ್ವಚ್ಛತಾ ಪಕ್ವಾಡ್’ ಕಾರ್ಯಕ್ರಮದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಜತೆಗೆ ಪರಿಸರ ಸಂರಕ್ಷಣೆ ಮಾಡುವ ಕಡೆ ಗಮನ ಹರಿಸಬೇಕು. ರಾಷ್ಟ್ರ ನಾಯಕರ ಜನ್ಮದಿನಾಚರಣೆ ಹಾಗೂ ಇನ್ನಿತರೆ ವಿಶೇಷ ದಿನಗಳಲ್ಲಿ ಪ್ರತಿಯೊಬ್ಬರು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಕಡೆ ಗಮನಹರಿಸಬೇಕು. ಇದರಿಂದ ನಮ್ಮ ಸುತ್ತಮುತ್ತಲಿನ ಪರಿಸರ ಸುಂದರವಾಗಿ ಇರುವುದರ ಜತೆಗೆ, ನಮ್ಮ ಆರೋಗ್ಯವು ಚೆನ್ನಾಗಿ ಇರುತ್ತದೆ ಎಂದು ಸಲಹೆ ನೀಡಿದರು.
ಮುಖ್ಯಶಿಕ್ಷಕ ಎಸ್.ಬಸವಣ್ಣ ಮಾತನಾಡಿ, ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರ ಹಾಗೂ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಉತ್ತಮ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಗೌರವಾಧ್ಯಕ್ಷ ಸುರೇಶ ಗೌಡ, ಪ್ರಧಾನ ಕಾರ್ಯದರ್ಶಿ ರಾಜಣ್ಣ, ಗುರು, ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಜೋಸ್ೆ, ಸಹ ಶಿಕ್ಷಕರಾದ ಪದ್ಮ, ಕಮಲಮ್ಮ, ಜ್ಯೋತಿ, ಅಂಜಲಿ ಹಾಗೂ ಇತರರು ಭಾಗವಹಿಸಿದ್ದರು.