

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ಪೊರಕೆ ಚಳುವಳಿ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಪೊರಕೆ ಕೈಯಲ್ಲಿ ಹಿಡಿದು ಮೆರವಣಿಗೆ ಹೊರಟು, ಶ್ರೀ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ ಮಾತನಾಡಿ, ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ರಾಜ್ಯಾದ್ಯಂತ ನಿರಂತರ ಹೋರಾಟ ಮಾಡುತ್ತಿದ್ದರೂ, ರಾಜ್ಯ ಸರ್ಕಾರ ಈ ವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಈ ಮೂಲಕ ಕಾವೇರಿ ನಿರ್ವಹಣಾ ಮಂಡಳಿ ಮತ್ತು ರಾಜ್ಯ ಸರ್ಕಾರ ರಾಜ್ಯ ರೈತರ ಪಾಲಿಗೆ ದ್ರೋಹ ಎಸಗುತ್ತಿದೆ ಎಂದು ಕಿಡಿಕಾರಿದರು.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಹೋರಾಟ ರೂಪಿಸಬೇಕಿದ್ದ ವಿರೋಧ ಪಕ್ಷಗಳು ಕಾಲಹರಣ ಮಾಡುತ್ತಿವೆ. ಕೆಆರ್‌ಎಸ್ ಜಲಾಶಯಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆಯೇ ಹೊರತು ಈವರೆಗೂ ಭೇಟಿ ನೀಡಿಲ್ಲ. ಈ ಕೂಡಲೇ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕನ್ನಡಪರ ಹೋರಾಟಗಾರರು ಹಾಗೂ ನಾಡಿನ ರೈತರ ಹೋರಾಟಕ್ಕೆ ಮಣಿಯದೇ ರಾಜ್ಯ ಸರ್ಕಾರ ಉದ್ಧಟತನ ಪ್ರದರ್ಶನ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಾ.ಮುರುಳಿ, ಚಾ.ವೆಂ.ರಾಜ್‌ಗೋಪಾಲ್, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ರವಿಚಂದ್ರ ಕಹಳೆ, ಮಹೇಶ್‌ಗೌಡ, ನಂಜುಂಡಸ್ವಾಮಿ, ಚಾ.ರಾ.ಕುಮಾರ್, ಪುರುಷೋತ್ತಮ್, ರಾಮು, ಡ್ಯಾನ್ಸ್ ಬಸವರಾಜು ಹಾಗೂ ಇತರರು ಭಾಗವಹಿಸಿದ್ದರು.