ಡಾ.ಸಂಜೀವ್ ವಿರುದ್ಧದ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

Published on

ಚಾಮರಾಜನಗರ : ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳ ಮಹಾಒಕ್ಕೂಟ ಮೇ 25 ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಎಂ. ಸೋಮೇಶ್ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್ ಡಾ.ಸಂಜೀವ್ ಅಪಮಾನಿಸಿದ್ದಾರೆ. ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಂಬೇಡ್ಕರ್ ಅನುಯಾಯಿಗಳ ಮಹಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಕೈಗೊಂಡಿದೆ. ಈ ಪ್ರತಿಭಟನೆಗೆ ಕಾಂಗ್ರೆಸ್ ವತಿಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿಮ್ಸ್ ಆಸ್ಪತ್ರೆಯ ಡೀನ್ ಡಾ.ಸಂಜೀವ್ ಈ ಹಿಂದೆಯೂ ದಲಿತ ವಿರೋಧಿ, ಜನವಿರೋಧಿಯಾಗಿ ನಡೆದುಕೊಳ್ಳುತ್ತಿದ್ದು, ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಹೊರಗುತ್ತಿಗೆ ನೌಕರರಿಗೆ ಸೂಕ್ತ ಸಮಯಕ್ಕೆ ಸಂಬಳ ನೀಡದೆ, ಏಜೆನ್ಸಿ ಜತೆೆ ಶಾಮೀಲಾಗಿ ಅಕ್ರಮ ಎಸಗಿದ್ದಾರೆ. ಸಿಮ್ಸ್ ವಿಲೀನಗೊಳಿಸುವ ಸಂದರ್ಭದಲ್ಲಿ ಸಾಕಷ್ಟು ಅನ್ಯಾಯ ಎಸಗಿದ್ದಾರೆ. ದಲಿತ ನೌಕರರ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ದುರಂತದಿಂದ ಮೃತಪಟ್ಟ 36 ಜನರ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದರು. ಯಾವುದೇ ತನಿಖೆ ಆಗಲಿಲ್ಲ. ಬಿಜೆಪಿ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಬೆನ್ನೆಲುಬಾಗಿ ನಿಂತಿದ್ದ ಕಾರಣಕ್ಕೆ ಸಿಮ್ಸ್ ಆಸ್ಪತ್ರೆಯಲ್ಲಿ ಹಲವು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿದರು.

ಡಾ.ಸಂಜೀವ್ ವಿರುದ್ಧ ಈಗಾಗಲೇ ಎಸ್ಸಿ/ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಎರಡು ಪ್ರಕರಣ ದಾಖಲಾಗಿದೆ. ಅಂಬೇಡ್ಕರ್ ಅವರನ್ನು ಅಪಮಾನ ಮಾಡಿರುವ ಪ್ರಕರಣದಲ್ಲಿ ಎಫ್‌ಐಆರ್ ಆಗಿದೆಯೇ ಹೊರತು ಸೂಕ್ತ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ಶಾಸಕರ ಗಮನಕ್ಕೆ ತಂದಿದ್ದೇವೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಡಾ.ಸಂಜೀವ್ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಮಾಡುವಂತೆ ಒತ್ತಾಯ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವ್, ಮುಖಂಡ ಶಿವಮೂರ್ತಿ, ನಾಗರಾಜ್, ಸಿ.ಕೆ. ರವಿಕುಮಾರ್, ಕುಮಾರ್ ನಾಯ್ಕ, ಎನ್‌ಎಸ್‌ಯುಐ ನಗು ಮೋಹನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net