

ಚಾಮರಾಜನಗರ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಮೀಸಲಾತಿ ಪ್ರಕಟಗೊಳಿಸದೇ ರಾಜ್ಯ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದರು.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಬಳಿಗೆ ಸರ್ಕಾರ ಹೋಗಬೇಕು ಎನ್ನುವ ಕಾರಣಕ್ಕೆ ಆಡಳಿತ ವಿಕೇಂದ್ರೀಕರಣಕ್ಕೆ ಒತ್ತು ನೀಡಿದೆ. ಈ ಮೂಲಕ ನಗರಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿಯನ್ನು ನೀಡುವ ಕೆಲಸಮಾಡಿದೆ. ಆದರೆ ರಾಜ್ಯದಲ್ಲಿರುವ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನ ಖಾಲಿಯಾಗಿ 3-4 ತಿಂಗಳು ಕಳೆದಿದೆ. ಈ ವರೆಗೂ ಸರ್ಕಾರ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಣೆ ಮಾಡದೇ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಗುರುವಾರ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸದೇ, ನಗರಸಭೆಗಳಲ್ಲಿ ಸಾಮಾನ್ಯ ಸಭೆ ನಡೆಯದೇ ಇರುವುದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಕೆಲಸಕಾರ್ಯಗಳು ಆಗುತ್ತಿಲ್ಲ. ಜನಪ್ರತಿನಿಧಿಗಳು ಜನರಿಗೆ ಉತ್ತರಿಸಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ
100 ದಿನ ಸಾಧನೆ ಅನ್ನುವ ಪ್ಲೆಕ್ಸ್‌ಗಳನ್ನು ಹಾಕಿಕೊಂಡು ಸಾಧನೆ ಎನ್ನುತ್ತಿದೆ. ಇದನ್ನು ಬಿಟ್ಟು ನಿಯಮಾನುಸಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಗಳಿಗೆ ತಕ್ಷಣ ಮೀಸಲಾತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹ್ಮದ್, ನಗರಸಭಾ ಸದಸ್ಯ ಮಹೇಶ್ ಗಾಳಿಪುರ, ಮಹಮ್ಮದ್ ಅಮಿಕ್, ಅಫ್ಸರ್ ಪಾಷಾ ಉಪಸ್ಥಿತರಿದ್ದರು.
ಮೇಲ್ವರ್ಗದ ಒತ್ತಡಕ್ಕೆ ಮಣಿದ ಸಿಎಂ:
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ್ದ ಕಾಂತರಾಜ್ ಆಯೋಗದ ವರದಿಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸದೇ ಸಿಎಂ ಮೇಲ್ವರ್ಗದ ಒತ್ತಡಕ್ಕೆ ಮಣಿದಿದ್ದಾರೆ ಎಂದು ಅಬ್ದುಲ್ ಮಜೀದ್ ಆರೋಪಿಸಿದರು.
ರಾಜ್ಯ ಸರ್ಕಾರ ಸಾರ್ವಜನಿಕರ ತೆರಿಗೆ ಹಣ 200 ಕೋಟಿ ರೂ. ಗಳನ್ನು ಖರ್ಚುಮಾಡಿ ಜಾತಿಗಣತಿ ನಡೆಸಿ ಅದನ್ನು ಹೊರತರಲು ಯಾಕೇ ಮೀನಾಮೇಷ ಎಣಿಸುತ್ತಿದೆ. ಸಮಾಜವಾದಿ, ಪ್ರಜಾಪ್ರಭುತ್ವವಾದಿ ಮತ್ತು ಹಿಂದುಳಿದ ವರ್ಗಗಳ ನಾಯಕ ಎಂದು ಕರೆಸಿಕೊಳ್ಳುವ ಸಿದ್ಧರಾಮಯ್ಯ, ಹಿಂದುಳಿದ ಸಮುದಾಯ ಹಾಗೂ ತಳಸಮುದಾಯಗಳ ಹಿತ ಕಾಪಾಡದೇ ಮೇಲ್ವರ್ಗದ ಒತ್ತಡಕ್ಕೆ ಮಣಿದು ಜಾತಿಗಣತಿ ಬಿಡುಗಡೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.