ಕಾವೇರಿ ನೀರು ಬಿಡುಗಡೆ ಖಂಡಿಸಿ ಪ್ರತಿಭಟನೆ

28chn3
Published on

ಚಾಮರಾಜನಗರ: ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾವೇರಿ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾವೇರಿ ಕ್ರಿಯಾ ಸಮಿತಿ ಸಂಚಾಲಕ ಚಾ.ರಂ.ಶ್ರೀನಿವಾಸ್‌ಗೌಡ ಮಾತನಾಡಿ, ರಾಜ್ಯದಲ್ಲಿ ಸೂಕ್ತರೀತಿಯಲ್ಲಿ ಮಳೆಯಾಗಿಲ್ಲ, ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಇದೆಲ್ಲವನ್ನು ಪರಿಗಣಿಸದೇ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡು ಪರವಾಗಿ ಏಕಪಕ್ಷೀಯ ಆದೇಶ ನೀಡುವ ಮೂಲಕ ರಾಜ್ಯದ ರೈತರಿಗೆ ಬರೆಯ ಮೇಲೆ ಬರೆ ಎಳೆಯುತ್ತಿದೆ.
ರಾಜ್ಯ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುವ ಮೂಲಕ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ ಎಂದು ಖಂಡಿಸಿದರು.

ಕಾವೇರಿ ನೀರು ಹಂಚಿಕೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿರುವ ಎಲ್ಲಾ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಿ ಯಶಸ್ವಿಗೊಳಿಸಬೇಕಾಗಿದೆ ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕಾವೇರಿ ಹೋರಾಟ ಕ್ರಿಯಾ ಸಮಿತಿ ಸಂಚಾಲಕ ಶಾ.ಮುರಳಿ, ರಾಜ್ಯ ಕಬ್ಬುಬೆಳೆಗಾರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಪಣ್ಯದಹುಂಡಿರಾಜು, ತಮಿಳು ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್‌ಅಹಮದ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಎಂ.ಕೃಷ್ಣಮೂರ್ತಿ, ಚಾ.ವೆಂ.ರಾಜ್‌ಗೋಪಾಲ್, ನಂಜುಂಡಶೆಟ್ಟಿ, ಲಿಂಗರಾಜು ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net