ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಿ

01chn4
Published on

ಚಾಮರಾಜನಗರ: ಸಮುದಾಯದ ಸಹಭಾಗಿತ್ವದಿಂದ ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ಸ್ವಚ್ಛತೆಯನ್ನು ಕಾಪಾಡಬಹುದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಹೇಳಿದರು.

ತಾಲೂಕಿನ ಬದನಗುಪ್ಪೆ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಹೆಗ್ಗೋಠಾರ ಮತ್ತು ಬದನಗುಪ್ಪೆ ಗ್ರಾಮ ಪಂಚಾಯಿತಿ ಹಾಗೂ ಸ್ವಚ್ಛಭಾರತ್ ಮಿಷನ್ ವತಿಯಿಂದ ಭಾನುವಾರ ಆಯೋಜಿಸಿದ್ದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಿದ್ದರು. ಈ ಮೂಲಕ ಒಂದು ಗಂಟೆಗಳ ಕಾಲ ಶ್ರಮದಾನ ಮಾಡುವಂತೆ ಹೇಳಿದ್ದರು. ಜಿಲ್ಲೆಯಾದ್ಯಂತ ಸ್ವಚ್ಛಾತಾ ಹಿ ಸೇವಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಜನರ ಸಹಭಾಗಿತ್ವದಿಂದ ಹೆಚ್ಚಿನ ಸ್ವಚ್ಛತೆಯನ್ನು ತರಬಹುದಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದಲ್ಲಿ ಸ್ವಚ್ಛತೆಯನ್ನು ತರುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಸರ್ಕಾರ ಮತ್ತು ಆಡಳಿತ ವ್ಯವಸ್ಥೆಗಿಂತಲೂ ಸಾರ್ವಜನಿಕರು ಮನಸ್ಸು ಮಾಡಿದರೆ ಉತ್ತಮವಾದ ಪರಿಸರವನ್ನು ನಿರ್ಮಾಣ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ್, ಸ್ವಚ್ಛ ಭಾರತ್ ಮಿಷನ್ ನೋಡಲ್ ಅಧಿಕಾರಿ ಪ್ರಭುಸ್ವಾಮಿ, ಮಹದೇವಸ್ವಾಮಿ, ಜೋಸ್ೆ, ಹೆಗ್ಗೋಠಾರ ಗ್ರಾ.ಪಂ ಅಧ್ಯಕ್ಷೆ ಆರ್.ಅಂಬಿಕಾ, ಬದನಗುಪ್ಪೆ ಗ್ರಾ.ಪಂ ಅಧ್ಯಕ್ಷ ಕುಮಾರ್, ಅಭಿವೃದ್ಧಿ ಅಧಿಕಾರಿ ಕೆ.ಜಿ.ಮಹದೇವಸ್ವಾಮಿ, ಎನ್.ಜಿ.ಮಾದಪ್ಪ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net