

ಚಾಮರಾಜನಗರ: ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದವರೆಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಕ್ರಿಯಾಯೋಜನೆ ತಯಾರಿಸಿ ಒಂದು ವಾರದೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಬರ ಪರಿಸ್ಥಿತಿ ಎದುರಾಗಿರುವುದರಿಂದ ಬರ ನಿರ್ವಹಣೆ ಸಂದರ್ಭವನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಸಮರ್ಪಕವಾಗಿ ಜನರಿಗೆ ದೊರೆಯುವಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಪಟ್ಟಿ ಮಾಡಲಾಗಿದೆ. ಚಾಮರಾಜನಗರ 22, ಗುಂಡ್ಲುಪೇಟೆ 24, ಹನೂರು 19, ಕೊಳ್ಳೇಗಾಲ 5 ಹಾಗೂ ಯಳಂದೂರಿನ 9 ಗ್ರಾಮಗಳು ಸೇರಿದಂತೆ ಒಟ್ಟು 79 ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದೆ. ಆರ್.ಒ. ಪ್ಲಾಂಟ್‌ಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಖಾಸಗಿ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಕುಸಿದಿದ್ದರೆ (ರೀಬೋರಿಂಗ್) ರೀಚಾರ್ಜ್ ಮಾಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು.
ಜಲಜೀವನ್ ಮಿಷನ್ ಯೋಜನೆ ಕಾಮಗಾರಿಯನ್ನು ಆದ್ಯತೆ ಮೇರೆಗೆ ವೇಗಗೊಳಿಸಬೇಕು. ಕಾಮಗಾರಿಯಲ್ಲಿ ದುಂದುವೆಚ್ಚಕ್ಕೆ ಅವಕಾಶವಾಗಬಾರದು. ಪೈಪ್‌ಲೈನ್ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಲುಷಿತ ನೀರು ಕುಡಿಯುವ ನೀರಿನ ಪೈಪ್‌ಲೈನ್‌ಗೆ ಸೇರದಂತೆ ಎಚ್ಚರ ವಹಿಸಬೇಕು. 15ನೇ ಹಣಕಾಸು ಯೋಜನೆ ಹಾಗೂ ವಿಶೇಷ ಅನುದಾನ ಸೇರಿದಂತೆ ಇತರೆ ಅವಶ್ಯ ಅನುದಾನಗಳನ್ನು ಬಳಸಿಕೊಂಡು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.
ನೀರಿನ ಲಭ್ಯತೆ ಕುರಿತು ಜಿಯಾಲಾಜಿಸ್ಟ್ (ಭೂಗರ್ಭ ಶಾಸ್ತ್ರಜ್ಞ) ರಿಂದ ಪಾಯಿಂಟ್ ಗುರುತಿಸಬೇಕು. ಖಾಸಗಿ ಬೋರ್‌ವೆಲ್‌ಗಳಿಗೆ ಜಿಯೋ ಟ್ಯಾಗ್ ಮಾಡಿಸಬೇಕು. ತಹಶೀಲ್ದಾರ್ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಕ್ಷೇತ್ರ ಭೇಟಿ ಸಂದರ್ಭದಲ್ಲಿ ನೀರಿನ ಪರೀಕ್ಷೆ ಮಾಡಿಸಬೇಕು. ವಹಿ ನಿರ್ವಹಿಸಬೇಕು. ಈ ಬಗ್ಗೆ ತಾಲೂಕುವಾರು ವರದಿ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಸಮೀಕ್ಷೆಯನ್ನು ಯಾವುದೇ ಬಗೆಯ ವಿಳಂಬಕ್ಕೆ ಅವಕಾಶವಾಗದಂತೆ ಶೀಘ್ರವಾಗಿ ಕೆಲಸ ಆಗಬೇಕು. ಪಿ.ಆರ್. ಗಳಿಗೆ ಅವಶ್ಯವಾಗಿರುವ ಗುರುತಿನ ಚೀಟಿ ನೀಡಬೇಕು. ಸಮೀಕ್ಷೆ ಕಾರ್ಯವನ್ನು ಅದಷ್ಟು ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳಿಗೆ ಲಸಿಕೆ ಕಾರ್ಯ, ಮಾರ್ಚ್ ಅಂತ್ಯದವರೆಗೆ ಮೇವಿನ ಲಭ್ಯತೆ, ಸಾಂಕ್ರಾಮಿಕ ರೋಗಗಳು ಹರಡುವಿಕೆ ತಡೆಯಲು ಜಾಗೃತಿ ಕಾರ್ಯಕ್ರಮಗಳ ಕುರಿತು ಪರಿಶೀಲಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್ ಹಾಗೂ ಇತರರು ಭಾಗವಹಿಸಿದ್ದರು.