ವಿದ್ಯುತ್ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

10chn1
Published on

ಚಾಮರಾಜನಗರ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಮಂಗಳವಾರ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆಯಲ್ಲಿ ಸಾಗಿ ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಬ್ಬುಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಕಳೆದ ವಾರದಿಂದಲೂ ಕೇವಲ 1 ಗಂಟೆ ಮಾತ್ರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಜಿಲ್ಲೆಯಲ್ಲಿರುವ ಸುಮಾರು 75 ಸಾವಿರ ಕೃಷಿ ಪಂಪ್‌ಸೆಟ್ ವ್ಯಾಪ್ತಿಯಲ್ಲಿ ಬೆಳೆದಿರುವ ಬೆಳೆಗಳಿಗೆ ನೀರು ಪೂರೈಕೆ ಮಾಡಲಾಗದೇ ಒಣಗುತ್ತಿದೆ ಎಂದರು.

ರೈತರು ಬೆಳೆದಿರುವ ಬೆಳೆ, ಜಾನುವಾರುಗಳಿಗೆ ಬೇಕಾದ ಮೇವು ಹಾಗೂ ಕುಡಿಯುವ ನೀರಿಗಾಗಿ ಕೃಷಿ ಪಂಪ್‌ಸೆಟ್‌ಗಳನ್ನೇ ನಂಬಿಕೊಂಡಿರುವ ಜನರಿಗೆ ತೊಂದರೆ ಉಂಟಾಗಿದೆ. ಈಗಲೇ ಇಂತಹ ಪರಿಸ್ಥಿತಿ ಎದುರಾದರೇ, ಮುಂದಿನ ದಿನಗಳಲ್ಲಿ ಬರದ ತೀವ್ರತೆ ಹೆಚ್ಚಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನಾ ಕೃಷಿ ಪಂಪ್‌ಸೆಟ್‌ಗಳಿಗೆ 10 ಗಂಟೆಗಳ ತ್ರಿೇಸ್ ವಿದ್ಯುತ್ ನೀಡುವ ಭರವಸೆ ನೀಡಿದಂತೆ ನಡೆದುಕೊಳ್ಳಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ನಿಲ್ಲಿಸಬೇಕು. ಟಿಸಿಗಳು ಸುಟ್ಟುಹೋದರೆ ತಕ್ಷಣ ಬದಲಾಯಿಸಬೇಕು. ಬೆಳೆ ನಷ್ಠವನ್ನು ಕೂಡಲಢ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜ್, ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ಗ್ರಾಮ ಘಟಕದ ಅಧ್ಯಕ್ಷ ಅರಳಿಕಟ್ಟೆ ಕುಮಾರ್, ಉಡಿಗಾಲ ಗ್ರಾಮ ಘಟಕದ ಅಧ್ಯಕ್ಷ ಮಂಜುನಾಥ್, ಮಹದೇವಸ್ವಾಮಿ, ಗುರುಸಿದ್ದಪ್ಪ, ಗುರುಮಲ್ಲಪ್ಪ, ಬಸವರಾಜಪ್ಪ, ಸತೀಶ್, ಮಹೇಂದ್ರ, ಬಸವರಾಜಪ್ಪ, ಪ್ರಶಾಂತ್, ಅಯ್ಯಪ್ಪ, ಕೃಷ್ಣ, ನಂದೀಶ್, ಶ್ರೀಕಂಠ, ರವಿ, ಗೌಡಿಕೆ ಮಹದೇವಪ್ಪ, ಸ್ವಾಮಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net