

ಚಾಮರಾಜನಗರ: ಸಾರ್ವಜನಿಕರಿಂದ ಬಂದಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಕ್ರಮವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು.
ತಾಲೂಕಿನ ಚಂದಕವಾಡಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಯೋಜನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನ, ಸಾರ್ವಜನಿಕರ ಸಮಸ್ಯೆಗಳ ಕುರಿತು ದೂರು ಮತ್ತು ಮನವಿಗಳನ್ನು ಸ್ವೀಕರಿಸಲಾಗಿದೆ. ಎಲ್ಲಾ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಕ್ರಮಕೈಗೊಳ್ಳಲಾಗುವುದು. ಸಭೆಯಲ್ಲಿ ಒಟ್ಟು 25 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ವಿದ್ಯುತ್ ಸಮಸ್ಯೆ, ಜಲಜೀವನ ಮಿಷನ್ ಯೋಜನೆ ಸಮಸ್ಯೆ ಹಾಗೂ ಇನ್ನಿತರೆ ಸಮಸ್ಯೆಗಳ ಕುರಿತು ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಅಭಿವೃದ್ದಿ ಸಹಾಯಕ ನಿರ್ದೇಶಕ ಕೆ.ವಿ.ಉಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜು, ಉಪಾಧ್ಯಕ್ಷೆ ಆರ್.ರಾಜೇಶ್ವರಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ಸಿದ್ದರಾಜು, ಕಾರ್ಯದರ್ಶಿ ಮಾದಪ್ಪ, ಲೆಕ್ಕಸಹಾಯಕ ರಾಜೇಶ್ ಹಾಗೂ ಇತರರು ಭಾಗವಹಿಸಿದ್ದರು.