ಮಾನಸಿಕ ಸಮತೋಲನಕ್ಕೆ ಕ್ರೀಡೆ ಸಹಕಾರಿ

22chn11
Published on

ಚಾಮರಾಜನಗರ: ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಸಹಕಾರಿಯಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್. ಭಾರತಿ ಸಲಹೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಒತ್ತಡದ ಕೆಲಸಗಳ ನಡುವೆಯೂ ಕ್ರೀಡೆ ಮನಸ್ಸಿನ ಸಮತೋಲನ ಕಾಪಾಡುತ್ತದೆ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಬಹುದು. ಹೀಗಾಗಿ ಕ್ರೀಡೆಗೆ ಎಲ್ಲರೂ ಹೆಚ್ಚು ಒತ್ತು ನೀಡಬೇಕು. ಪೊಲೀಸ್ ಇಲಾಖೆ ಸಿಬ್ಬಂದಿಗಳು 24 ಗಂಟೆಯು ಕೆಲಸ ನಿರ್ವಹಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ ಕ್ರೀಡೆಗಳು ಅವಶ್ಯಕವಾಗಿದೆ. ಪ್ರತಿ ವರ್ಷವು ಕ್ರೀಡಾ ಚಟುವಟಿಕೆಗಳು ನಡೆಯುವುದರಿಂದ ಆರೋಗ್ಯಕರ ಬದಲಾವಣೆ ಕಾಣಲೂ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ಜಿಲ್ಲೆಯಲ್ಲಿ 25ನೇ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. 5 ತಂಡಗಳು ಈಗಾಗಲೇ ಭಾಗವಹಿಸಿದ್ದು, ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ದಿನದ 24 ಗಂಟೆಗಳ ಕಾಲವು ಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ಇಂತಹ ಕ್ರೀಡಾ ಚಟುವಟಿಕೆಗಳಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಗೆಲುವು ಸೋಲಿನ ಮನೋಭಾವನೆ ಬಿಟ್ಟು ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪ.ಜೆ. ಕಂಟ್ರಾಕ್ಟರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net