ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಳುಚೆಲ್ಲಿ ಪ್ರತಿಭಟನೆ

24chn1
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಎಳ್ಳು ಚೆಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಶುಕ್ರವಾರ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಳುಚೆಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತೆ ತಿಂಗಳಕಾಲ ನಿತ್ಯ2700 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ರಾಜ್ಯದಲ್ಲಿ ಮಳೆಯಿಲ್ಲದೆ ಕಾವೇರಿ ಕೊಳ್ಳದ ಜಲಾಶಯಗಳು ಬತ್ತಿ ಹೋಗಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಕಣ್ಣುಮುಚ್ಚಿಕೊಂಡಿವೆ ಎಂದು ದೂರಿದರು.

ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿ ವಜಾಗೊಳಿಸಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ತಮಿಳುನಾಡಿಗೆ ನೀರು ನಿಲ್ಲಿಸುವ ತನಕ ಹೋರಾಟ ಮಾಡಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿರಾಜು, ಗು.ಪುರುಷೋತ್ತಮ, ಚಾ.ವೆಂ.ರಾಜ್ ಗೋಪಾಲ್, ನಿಜಧ್ವನಿಗೋವಿಂದರಾಜು, ಚಾ.ಸಿ.ಸಿದ್ದರಾಜು, ವೀರಭದ್ರ, ಪ್ರಕಾಶ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net