ವಸತಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ

24chn8
Published on

ಚಾಮರಾಜನಗರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ ಎಂದು ಸಹಕಾರ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಪಂಚಾಯಿತಿ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸತಿ ಶಾಲೆಗಳಿಗೆ ಭೇಟಿ ನೀಡಿದ ವೇಳೆ ಮೂಲ ಸೌಕರ್ಯಗಳಲ್ಲಿ ಕೊರತೆ ಇರುವುದು ಕಂಡು ಬಂದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಇರುವ ವಸತಿ ಶಾಲೆಗಳಲ್ಲಿ ಸಮರ್ಪಕವಾಗಿ ಮೂಲಸೌಲಭ್ಯಗಳು ಇವೆಯೇ ಎಂಬ ಬಗ್ಗೆ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ನ್ಯೂನತೆ ಕೊರತೆಗಳಿದ್ದಲ್ಲಿ ಪಟ್ಟಿ ಮಾಡಿ ಗಮನಕ್ಕೆ ತರಬೇಕು. ಇದು ನಿಮ್ಮ ಜವಾಬ್ದಾರಿಯಾಗಿದೆ. ಸೌಲಭ್ಯಗಳ ಸುಧಾರಣೆಗೆ ನಿರಂತರ ಗಮನಹರಿಸಬೇಕು. ಶೈಕ್ಷಣಿಕ ಗುಣಮಟ್ಟ ಹೆಚ್ಚಳವಾಗಬೇಕು ಎಂದರು.

ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆ ಮಾಡುವಾಗ ಗುಣಮಟ್ಟದ ಕೆಲಸವಾಗಬೇಕು. 5 ಲಕ್ಷ ರೂ. ಒಳಗಿನ ಕಾಮಗಾರಿಗಳಿಗೆ ಆರಂಭದಿಂದಲೇ ಸೋಶಿಯಲ್ ಆಡಿಟ್ ಆಗಬೇಕು. ತ್ವರಿತವಾಗಿ ಇಲಾಖಾ ಅನುದಾನದಡಿ ಕಾಮಗಾರಿ ನಡೆಯಬೇಕು. ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು ಎಂದು ತಾಕೀತು ಮಾಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ವೇಗ ಇರಬೇಕು. ಮಳೆ ಕೊರತೆ ಕಾರಣದಿಂದ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಬಗ್ಗೆ ಹೆಚ್ಚು ಒತ್ತು ನೀಡಬೇಕಿದೆ ಎಂದರು.
ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿರುವ ಸಾಲ ಸೌಲಭ್ಯ ಬಗ್ಗೆ ಪ್ರಗತಿ ಪರಿಶೀಲಿಸಿದ ವೇಳೆ ಸಹಕಾರ ಸಂಘಗಳಿಗೆ ರೈತರ ನೋಂದಣಿ ಮಾಡಿಸುವಲ್ಲಿ ಸಹಕಾರ ಇಲಾಖೆ ವಿಶೇಷ ಮುತುವರ್ಜಿ ವಹಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದ ರೈತರಿಗೆ ಸಹಕಾರ ಸಂಘದ ಸದಸ್ಯತ್ವಕ್ಕೆ ಇಲಾಖೆಯಿಂದಲೇ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಕಾರ್ಯಕ್ರಮ ಸದ್ಬಳಕೆಯಾಗಬೇಕು ಎಂದು ತಿಳಿಸಿದರು.

ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ಮಹೇಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net