

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪುಚೆಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಶನಿವಾರ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು, ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪುಚೆಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತೆ ತಿಂಗಳಕಾಲ ನಿತ್ಯ2700 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿರುವುದು ಅತ್ಯಂತ ಖಂಡನೀಯ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಕಣ್ಣುಮುಚ್ಚಿಕೊಂಡಿದ್ದು, ಕರ್ನಾಟಕ ಋಣ ತೀರಿಸುವಲ್ಲಿ ವಿಫಲವಾಗಿವೆ ಎಂದು ದೂರಿದರು.
ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿ ವಜಾಗೊಳಿಸಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ತಮಿಳುನಾಡಿಗೆ ನೀರು ನಿಲ್ಲಿಸುವ ತನಕ ಹೋರಾಟ ಮಾಡಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿರಾಜು, ಗು.ಪುರುಷೋತ್ತಮ, ಚಾ.ವೆಂ.ರಾಜ್ ಗೋಪಾಲ್, ವೀರಭದ್ರ, ಪ್ರಕಾಶ್, ರಾಚಪ್ಪ ಇತರರು ಭಾಗವಹಿಸಿದ್ದರು.