ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾಕಾರ್ಯಕರ್ತರ ಪ್ರತಿಭಟನೆ

19chn1
Published on

ಚಾಮರಾಜನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ದುಡಿಯುವ ಜನರ ಪರ್ಯಾಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ಹಾಗೂ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಹಿಂದಿನ ಸರ್ಕಾರಗಳು ಅನುಸರಿಸಿದ ನೀತಿಗಳನ್ನೇ ಮುಂದುವರಿಸಿ ದುಡಿಯುವ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಖಾಯಂ ಉದ್ಯೋಗ ಕಡಿತ, ಜನಹಿತಕ್ಕೆ ವಿರುದ್ಧವಾಗಿ ಹೆಚ್ಚುತ್ತಿರುವ ಖಾಸಗೀಕರಣದಿಂದ ಸೇವಾ ಭದ್ರತೆ ಮಾಯವಾಗುತ್ತಿದೆ. ಗ್ರಾಮೀಣ ಭಾಗದ ಅಸಂಘಟಿತ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಈ ನಿಟ್ಟಿನಲ್ಲಿ ದೇಶವ್ಯಾಪಿ ಡಿ.15-21 ರವರೆಗೆ ಪ್ರತಿಭಟನಾ ಸಪ್ತಾಹಕ್ಕೆ ಕರೆ ನೀಡಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು, ಪಿಂಚಣಿಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಳೆಯ ಪಿಂಚಣೀ ಯೋಜನೆಯನ್ನು ಜಾರಿಗೊಳಿಸಬೇಕು. ಆಶಾ ಕಾರ್ಯಕರ್ತರನ್ನು ಖಾಯಂಗೊಳಿಸಬೇಕು. ಆಗೆಯೇ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು. ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಗೊಳಿಸಬೇಕು. ಕಾರ್ಮಿಕರ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕಅರ್ಮಿಕ ಕಾನೂನುಗಳ ಉಲ್ಲಂಘನೆಯ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ತಾಲೂಕು ಅಧ್ಯಕ್ಷರಾದ ಜಿ.ರಾಣಿ, ಸುಲೋಚನ, ಚೆನ್ನಂಜಮ್ಮ, ಮಂಜುಳ, ಉಮಾ, ಶಶಿಕಲಾ, ಶಿವಮ್ಮ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net