ಕಾವೇರಿ ನೀರು ನಿರ್ವಹಣಾ ಮಂಡಳಿ ಭಿತ್ತಿಪತ್ರ ಹರಿದು ಪ್ರತಿಭಟನೆ

20chn4
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಕಾವೇರಿ ನೀರು ನಿರ್ವಹಣಾ ಮಂಡಳಿ ಭಿತ್ತಿಪತ್ರ ಹರಿದು ಬುಧವಾರ ಪ್ರತಿಭಟನೆ ನಡೆಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಮುಂದಿನ ವರ್ಷದ ಜನವರಿ ಅಂತ್ಯದವರೆಗೂ ನಿತ್ಯ 1030 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಸರ್ಕಾರಕ್ಕೆ ಸೂಚಿಸಿರುವುದು ಅತ್ಯಂತ ಖಂಡನೀಯವಾಗಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿಯು ಪದೇಪದೇ ತಮಿಳುನಾಡಿನ ಪರ ತೀರ್ಪು ನೀಡುತ್ತಿದ್ದು ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಪರಿಶೀಲಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರಾರಂಭದಿಂದಲೂ ರಾಜ್ಯಕ್ಕೆ ಅನ್ಯಾಯ ಮಾಡಿಕೊಂಡು ಬರುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ಕೇಂದ್ರ ಸರ್ಕಾರ ವಜಾಗೊಳಿಸಬೇಕು. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಮಾಡಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಮಹೇಶ್ ಗೌಡ, ಗು.ಪುರುಷೋತ್ತಮ್, ಚಾ.ವೆಂ.ರಾಜ್ ಗೋಪಾಲ್,ಚಾ.ರಾ.ಕುಮಾರ್, ಚಾ.ಹ.ರಾಮು, ಮಂಜು, ಲಿಂಗರಾಜು ವೀರಭದ್ರ, ಚಾ.ಸಿ.ಸಿದ್ದರಾಜು, ಪ್ರಕಾಶ್, ತಾಂಡವಮೂರ್ತಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net