

ಚಾಮರಾಜನಗರ: ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಅವರ ರಕ್ಷಣೆಗೆ ಅಧಿಕಾರಿಗಳು ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ಭಾರತಿ ಸಲಹೆ ನೀಡಿದರು.
ನಗರದ ಹಳ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಹೆಚ್ಚಾಗುತ್ತಿರುವ ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆ ಪ್ರಕರಣಗಳಲ್ಲಿ ಪೊಲೀಸರು ಸಂಧಾನ ಮಾಡಿಸಲು ಮುಂದಾಗುತ್ತಿರುವುದು ಆತಂಕ ಮೂಡಿಸುತ್ತದೆ. ಶೂನ್ಯ ಪ್ರಕರಣಗಳನ್ನು ತೋರಿಸುವ ಉದ್ದೇಶದಿಂದ ರಾಜೀ ಮಾಡಿಸಲು ಮುಂದಾಗುವುದು ಸರಿಯಲ್ಲ. ಅಂತವರು ಸಮಾಜದಲ್ಲಿ ಹೆಚ್ಚಾಗುತ್ತಿರುವುದರಿಂದ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಷ್ಠೆ ಮತ್ತು ಅಂತರಾಳದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ನ್ಯಾಯಾಲಯ ನಮ್ಮ ಮನೆ ಮುಂದೆ ಬಂದು ನೆರವು ನೀಡುವ ಮಟ್ಟಕ್ಕೆ ನಮ್ಮ ಸಮಾಜ ತಲುಪಿದೆ. ಸಂವಿಧಾನ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವ ಸಂಸ್ಥೆಯ ಮಕ್ಕಳ ಒಡಂಬಡಿಕೆಯನ್ನು ದೇಶ ಒಪ್ಪಿಕೊಂಡಿದೆ. ಇಂತಹ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.
ಮಕ್ಕಳ ಪರವಾಗಿ ಸಾಕಷ್ಟು ಸವಲತ್ತುಗಳಿವೆ ಆದರೆ ಯಾವುದು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಬಾಲ್ಯವಿವಾಹ, ಮಕ್ಕಳ ಮೇಲಿನ ಅತ್ಯಾಚಾರ, ಭಿಕ್ಷಾಟನೆ, ವಲಸೆ ಹೋಗುವ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅದನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಬೇಕಾಗಿದೆ. ಪ್ರತಿ ಹತ್ತು ಮದುವೆಗಳಲ್ಲಿ ಮೂರು ಬಾಲ್ಯ ವಿವಾಹ ನಡೆಯುತ್ತಿದೆ ಎಂದು ಯುನಿಸೆಫ್ ವರದಿ ಹೇಳುತ್ತದೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ.ಎಂ.ಶ್ರೀಧರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಡಿವೈಎಸ್ಪಿ ಲಕ್ಷ್ಮಯ್ಯ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಚೆಲುವರಾಜ್, ಆಪ್ತ ಸಮಾಲೋಚಕಿ ಮೇಘನಾ ಹಾಗೂ ಇತರರು ಉಪಸ್ಥಿತರಿದ್ದರು.