

ಚಾಮರಾಜನಗರ: ಅಂಗನವಾಡಿ ಕೇಂದ್ರಗಳಿಗೆ ಎಂಎಸ್‌ಪಿಎಸ್ ವತಿಯಿಂದ ನೀಡುವ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಕ್ಕಳ ಆರೋಗ್ಯ ಸ್ಥಿತಿ ಹದಗೆಡಲು ಕಾರಣವಾಗಿದೆ ಎಂದು ಆರೋಪಿಸಿ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಅಧ್ಯಕ್ಷೆ ಲಕ್ಷ್ಮಿಮಹೇಶ್ ಮಂಗಳವಾರ ದೂರು ನೀಡಿದರು.
ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಗೆ ತೆರಳಿ ಉಪನಿರ್ದೇಶಕ ಮಂಜುನಾಥ್ ಅವರಿಗೆ ದೂರು ನೀಡಿ ಮಾತನಾಡಿದ ಅವರು, ಗುಂಡ್ಲುಪೇಟೆ ತಾಲೂಕಿನ ಕಗ್ಗದಹುಂಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಮರ್ಪಕವಾಗಿ ನೀಡುತ್ತಿಲ್ಲ. ಈ ಬಗ್ಗೆ ಕೇಳಿದರೆ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ, ಇದೇ ರೀತಿ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ. ಅದಲ್ಲದೇ ಅಶುಚಿತ್ವ ಮತ್ತು ಮೂಲಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ. ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಇಂತಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟವನ್ನು ಪರೀಕ್ಷಿಸುತ್ತಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಪ್ರತಿಕ್ರಿಯಿಸಿ, ಇನ್ನು ಮುಂದೆ ಆಹಾರ ಪದಾರ್ಥ ಪೂರೈಕೆ ಮಾಡುವಂತಹ ಅಂಗನವಾಡಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಇದೇ ರೀತಿಯ ಸಮಸ್ಯೆ ಕಂಡು ಬಂದರೆ ದೂರು ಸಲ್ಲಿಸಬಹುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ರಾಜಪ್ಪ ಬೆಳವಾಡಿ, ಜಿಲ್ಲಾ ಅಧ್ಯಕ್ಷ ಮಂಜುನಾಥ್ ಬೊಮ್ಮನಹಳ್ಳಿ, ತಾಲೂಕು ಅಧ್ಯಕ್ಷ ವಾಸು ಗುಂಡ್ಲುಪೇಟೆ ಹಾಜರಿದ್ದರು.