ಸಂಚಾರ ನಿಯಮಗಳನ್ನು ವಿದ್ಯಾರ್ಥಿಗಳು ಪಾಲಿಸಿ

31chn6
Published on

ಬೇಗೂರು : ವಿದ್ಯಾರ್ಥಿಗಳು ಕಾನೂನು, ರಸ್ತೆ ಸುರಕ್ಷತೆ ಮುಂತಾದ ನಿಯಮಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಬೇಗೂರು ಪೊಲೀಸ್ ಠಾಣಾಧಿಕಾರಿ ಚರಣ್‌ಗೌಡ ಹೇಳಿದರು.

ಬೇಗೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬೇಗೂರು ಪೊಲೀಸ್ ಠಾಣೆ ವತಿಯಿಂದ ಭಾನುವಾರ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ, ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ, ಪ್ರತಿಯೊಬ್ಬರು ರಸ್ತೆ ಸುರಕ್ಷತೆಯ ನಿಯಮಗಳನ್ನು ಅರಿತುಕೊಂಡರೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಸೇರಿದಂತೆ 18 ವರ್ಷದೊಳಗಿನವರು ಯಾವುದೇ ವಾಹನವನ್ನು ಓಡಿಸುವುದು ಕಾನೂನಿನ ಪ್ರಕಾರ ಅಪರಾಧವಾಗುತ್ತದೆ. ಪ್ರತಿ ವಾಹನ ಸವಾರರು ಕಡ್ಡಾಯವಾಗಿ ಚಾಲನಾ ಪರವಾನಗಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಅಪ್ರಾಪ್ತ ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಪೋಕ್ಸೋ ಕಾಯ್ದೆ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಪಾಲಕರು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿ ದಿಸೆಯಲ್ಲೇ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು ಒಳ್ಳೆಯ ನಾಗರಿಕರಾಗಬೇಕು. ಇತ್ತೀಚೆಗೆ ಮಕ್ಕಳು ಮಾದಕ ವಸ್ತುಗಳು ಮತ್ತು ತಂಬಾಕು ಉತ್ಪನ್ನಗಳ ವ್ಯಸನಿಗಳಾಗುತ್ತಿದ್ದು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಂಶುಪಾಲ ಮಹೇಂದ್ರ, ನಿಲಯಪಾಲಕ ಎಚ್.ಎನ್.ಮಂಜುನಾಥ್, ಪ್ರಸನ್ನ, ಅಜಿತ್, ವಸತಿ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net