

ಚಾಮರಾಜನಗರ: ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಹಾಗೂ ರಾಮಭಕ್ತರ ಮೇಲೆ ಕಾಂಗ್ರೆಸ್ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗ ಗುರುವಾರ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿಂದ ಅರೆಬೆತ್ತಲೆಯಲ್ಲಿ ಮೆರವಣಿಗೆ ಹೊರಟ ಬಿಜೆಪಿ ಕಾರ್ಯಕರ್ತರು ಶ್ರೀಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ಎನ್.ಮಹೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ 1992 ರಲ್ಲಿ ನಡೆದಿರುವಂತಹ ಒಂದು ಘಟನೆಗೆ ಈಗ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬ ಹಿಂದು ಕಾರ್ಯಕರ್ತರೊಬ್ಬರನ್ನು ಬಂಧನ ಮಾಡಿದ್ದಾರೆ. 1992 ರಲ್ಲಿ ಅಯೋಧ್ಯೆಯಲ್ಲಿ ಮಸೀದಿಯನ್ನು ಉರುಳಿಸಿ ರಾಮಮಂದಿರವನ್ನು ನಿರ್ಮಾಣ ಮಾಡಬೇಕು ಎಂದು ಕರಸೇವಕರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಸಹ ನೀಡಿದ್ದು, ಅದರ ಆಧಾರದ ಮೇಲೆ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕರಸೇವಕರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮಭಕ್ತರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದರು.
ಅಯೋಧ್ಯೆಯಲ್ಲಿ ಜ.22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಉದ್ಘಾಟನೆ ಮಾಡುತ್ತಾರೆ. ಅಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಹಿಂದು, ಮುಸ್ಲಿಂ, ಕ್ರೈಸ್ತ ಎಂಬ ಧರ್ಮ ಬೇಧವಿಲ್ಲದೆ ಇಡೀ ದೇಶವೇ ರಾಮ ಮಂದಿರ ಉದ್ಘಾಟನೆಗೆ ಕಾಯುತ್ತಿದ್ದಾರೆ. ಹಳ್ಳಿಹಳ್ಳಿಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ 35 ವರ್ಷದ ಹಿಂದಿನ ಘಟನೆಗೆ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿರುವುದರ ಹಿಂದೆ ಕಾಂಗ್ರೆಸ್ ಸರ್ಕಾರದ ಹುನ್ನಾರವಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಸ್.ಬಾಲರಾಜ್, ಸಿ.ಎಸ್.ನಿರಂಜನ್ ಕುಮಾರ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರು, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ನಗರಸಭಾ ಸದಸ್ಯರಾದ ಸುದರ್ಶನ್ ಗೌಡ, ಶಿವರಾಜ್, ಓಬಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪಿ.ವೃಷಭೇಂದ್ರಪ್ಪ, ಮಾಧ್ಯಮ ವಕ್ತಾರ ಅಯ್ಯನಪುರ ಶಿವಕುಮಾರ್, ಎಸ್ಸಿ ಮೋರ್ಚಾ ಅಧ್ಯಕ್ಷ ಮೂಡ್ನಾಕೂಡು ಪ್ರಕಾಶ್, ಎಸ್ಟಿ ಮೋರ್ಚಾ ಅಧ್ಯಕ್ಷ ಬಿ.ಜಯಸುಂದರ್, ಟೌನ್ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವು, ಮಾಧ್ಯಮ ಸಂಚಾಲಕ್ ಎನ್.ಮಂಜುನಾಥ್, ಶಿವು ವಿರಾಟ್ ಹಾಗೂ ಇತರರು ಭಾಗವಹಿಸಿದ್ದರು.