

ಚಾಮರಾಜನಗರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ, ಇನ್ನಿತರ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರ ಯೋಜನೆಗಳ ಕುರಿತ ಮೂರು ದಿನಗಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪರಿಪೂರ್ಣವಾಗಿ ಜಾರಿಗೊಳಿಸಿದೆ. ಮಾ.8 ರಿಂದ 10 ರವರೆಗೆ ವಸ್ತು ಪ್ರದರ್ಶನ ನಡೆಯಲಿದೆ. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ವಸ್ತು ಪ್ರದರ್ಶನ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಚಾರ ಮಾಹಿತಿಗಳನ್ನು ವೀಕ್ಷಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎ.ರಮೇಶ್ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.