ಲೋಕಸಭಾ ಚುನಾವಣೆ ಸಿದ್ಧತಾಕಾರ್ಯ ಪೂರ್ಣಗೊಳಿಸಿ

13rajesh9
Published on

ಚಾಮರಾಜನಗರ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಕಾರ್ಯಗಳಿಗೆ ನಿಯೋಜಿತರಾಗಿರುವ ವಿವಿಧ ನೋಡಲ್ ಅಧಿಕಾರಿಗಳು ಪೂರ್ವ ಸಿದ್ದತಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತರಾಗಿರುವ ಜಿಲ್ಲಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಸಂಬಂಧಿ ಕರ್ತವ್ಯ ನಿರ್ವಹಣೆಗೆ 16 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿಯೊಬ್ಬರಿಗೂ ನಿರ್ವಹಿಸಬೇಕಿರುವ ಜವಾಬ್ದಾರಿಗಳನ್ನು ನಿಗದಿಪಡಿಸಲಾಗಿದೆ. ಚುನಾವಣೆ ಘೋಷಣೆಯಾದ ಕೂಡಲೇ ನಿರ್ವಹಿಸಬೇಕಿರುವ ಕರ್ತವ್ಯಗಳ ಕುರಿತ ಪೂರ್ವ ಸಿದ್ದತಾ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ತಿಳಿಸಿದರು.

ಮತಗಟ್ಟೆಗಳ ಭೌತಿಕ ಪರಿಶೀಲನೆ, ಮತಗಟ್ಟೆ ಸಿಬ್ಬಂದಿ ನಿಯೋಜನೆ, ಚುನಾವಣೆಗೆ ಅಗತ್ಯ ಬೀಳಬಹುದಾದ ವಾಹನಗಳ ಬೇಡಿಕೆ, ಇನ್ನಿತರ ಬಹುಮುಖ್ಯ ಸಿದ್ದತೆಗಳನ್ನು ಪರಿಪೂರ್ಣಗೊಳಿಸಬೇಕು. ಯಾವುದೇ ಕೆಲಸ ಬಾಕಿ ಉಳಿಸಿಕೊಳ್ಳದೇ ಸಮರ್ಪಕವಾಗಿ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕು. ಮಾದರಿ ನೀತಿ ಸಂಹಿತೆ ಅನುಷ್ಠಾನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಂತರ ಜಿಲ್ಲಾ, ರಾಜ್ಯ, ಗಡಿ ಚೆಕ್ ಪೋಸ್ಟ್ ಗಳನ್ನು ತೆರೆದು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಿದೆ. ಚೆಕ್ ಪೋಸ್ಟ್ ಗಳಲ್ಲಿ ಕುಡಿಯುವ ನೀರು, ಹತ್ತಿರದಲ್ಲಿಯೇ ಶೌಚಾಲಯ, ಇನ್ನಿತರ ಮೂಲ ಸೌಕರ್ಯಗಳು ಇರಬೇಕು. ಚೆಕ್ ಪೋಸ್ಟ್ ಗಳು 24*7 ಕಾರ್ಯ ನಿರ್ವಹಿಸಬೇಕಿದೆ. ಬಿಸಿಲು ಬೇಗೆಯೂ ಹೆಚ್ಚಿದೆ. ಹೀಗಾಗಿ ಉತ್ತಮ ಗುಣಮಟ್ಟದ ನೆರಳಿನ ವ್ಯವಸ್ಥೆ ಇರಬೇಕಿದೆ. ಈ ಎಲ್ಲಾ ಕೆಲಸಗಳು ಬೇಗನೆ ಮಾಡಬೇಕೆಂದು ನಿರ್ದೇಶನ ನೀಡಿದರು.

ಮತದಾನ ಜಾಗೃತಿಗಾಗಿ ಸ್ವೀಪ್ ಚಟುವಟಿಕೆಗಳು ವ್ಯಾಪಕವಾಗಿ ನಡೆಸಬೇಕು. ವಿಭಿನ್ನ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿಯೂ ಆಯೋಜಿಸಿ ಮತದಾನದ ಮಹತ್ವ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು. ಯುವಜನರಲ್ಲಿ ವಿಶೇಷವಾಗಿ ಮತದಾನದ ಬಗ್ಗೆ ಜಾಗೃತಿ ಉಂಟು ಮಾಡುವ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಕಳೆದ ಬಾರಿ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿರುವ ಮತಗಟ್ಟೆಗಳ ವ್ಯಾಪ್ತಿಯ ಪ್ರದೇಶದಲ್ಲಿ ಹೆಚ್ಚು ಮತದಾನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net