ಹೊಟ್ಟೆಗೆ ತಣ್ಣಿರು ಬಟ್ಟೆ ಹಾಕಿಕೊಂಡು ಪ್ರತಿಭಟನೆ

07chn1 (1)
Published on

ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಯನ್ನು ಖಂಡಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಕಚೇರಿಯ ಮುಂಭಾಗ ಜಮಾಯಿಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಕರ್ನಾಟಕ ಮತ್ತು ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ ಮಾತನಾಡಿ, ಕಾವೇರಿ ಹಾಗೂ ಕಬಿನಿ ಜಲಾಶಯ ವಿವಾದದ ತೀರ್ಪು ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಹೊರ ಬೀಳುತ್ತದೆ ಎಂದು ಆದೇಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದೂಡಿದೆ. ಆದರೆ ರಾಜ್ಯ ಸರ್ಕಾರ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದರಿಂದ ರೈತರು ನಿರಾಸೆಗೊಂಡಿದ್ದು, ರಾಜ್ಯ ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರೈತರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕಿದೆ ಎಂದು ವಿನೂತನ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಕಾವೇರಿ ವಿಚಾರದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕಾವೇರಿಯ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಸುಪ್ರೀಂಕೋರ್ಟ್ ಹಾಗೂ ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯ ಸರ್ಕಾರ ಮನವಿ ಮಾಡದೇ ನೀರು ಬಿಟ್ಟಿರುವುದನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ. ಉತ್ತರ ಕರ್ನಾಟಕದ ಸಂಘಟನೆಗಳು ಮತ್ತು ರೈತರು, ಕಾವೇರಿ ಹೋರಾಟಕ್ಕೆ ಬೆಂಬಲ ನೀಡಬೇಕು. ಕಳಸಾ ಬಂಡೂರಿ ಸಮಸ್ಯೆ ಆದಾಗ ನಮ್ಮ ಹಳೆಯ ಮೈಸೂರು ಭಾಗದ ಜನರು ಬೆಂಬಲ ನೀಡಿದ್ದಾರೆ. ನಿಮ್ಮ ಬೆಂಬಲ ನಮಗೆ ಅತ್ಯಗತ್ಯ ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಾ.ಮುರುಳಿ, ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ಸಾಗರ್‌ರಾವತ್, ಮಹೇಶ್‌ಗೌಡ, ಪುರುಷೋತ್ತಮ್, ಗಡಿನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ತಾಂಡವಮೂರ್ತಿ, ಸಿದ್ದರಾಜು, ಲಿಂಗರಾಜು, ಆಟೋ ನಾಗರಾಜ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net