ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಖಂಡನೆ

23raju3
Published on

ಚಾಮರಾಜನಗರ: ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಗೆ ಅನುಮತಿ ನೀಡಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.


ನಗರದ ಜಿಲ್ಲಾಡಳಿತ ಭವನದ ಮುಂಭಾಗ ಗುರುವಾರ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿದರು.
ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿ ಗರಿಷ್ಠ 9 ಗಂಟೆಯಿಂದ 12 ಗಂಟೆವರೆಗೆ ಹೆಚ್ಚಿಸಿ ಹಾಗೂ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ-1948ಕ್ಕೆ ತಿದ್ದುಪಡಿ ಮಾಡಿ ಕಾರ್ಖಾನೆಗಳ(ಕರ್ನಾಟಕ ತಿದ್ದುಪಡಿ) ವಿಧೇಯಕ 2023ನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಮಾಡಿರುವುದನ್ನು ವಿರೋಧಿಸುತ್ತೇವೆ ಎಂದರು.


1948 ಕಾಯ್ದೆಯು ದಿನದ ಕೆಲಸದ ಅವಧಿಯ ಆರಂಭದಿಂದ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮ ನೀಡಬೇಕೆಂದು ಹೇಳುತ್ತದೆ. ಆದರೆ ಈ ತಿದ್ದುಪಡಿ ವಿಧೇಯಕದಲ್ಲಿ ಯಾವುದೇ ವಿರಾಮವಿಲ್ಲದೆ ದುಡಿಮೆ ಮಾಡುವ ಅವಧಿ ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಿ ಹಾಗೂ ಕಾರ್ಮಿಕರ ದಿನದ ಕೆಲಸದ ಗರಿಷ್ಠ ಅವಧಿ 9ರಿಂದ 12 ಗಂಟೆಗೆ ಹೆಚ್ಚಿಸಿ ಕಾರ್ಮಿಕರ ಶೋಷಣೆಗೆ ಮತ್ತಷ್ಟು ಅವಕಾಶ ಕಲ್ಪಿಸಿದೆ ಎಂದು ದೂರಿದರು.


ಉದ್ಯೋಗದ ಕಡಿತ, ಕಡಿಮೆ ವೇತನಕ್ಕೆ ದುಡಿಮೆ, ಅಧಿಕ ಉತ್ಪಾದನೆ ಮಾಡಿಸಿಕೊಳ್ಳುವುದು ಈ ಅವಧಿಯಲ್ಲಿ ಹೆಚ್ಚಾಗಿದೆ. ಈ ತಿದ್ದುಪಡಿಗಳು ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಾಯದಿಂದ ಕಾರ್ಮಿಕರ ಶೋಷಣೆ ಹೆಚ್ಚಾಗಲಿದೆ. ಹಲವು ಕಾರ್ಖಾನೆ ಮಾಲೀಕರಿಗೆ ಆರು ದಿನಗಳ ಉತ್ಪಾದನೆಯನ್ನು ನಾಲ್ಕು ದಿನಗಳಲ್ಲೇ ಮಾಡಲು ಈ ಕಾಯ್ದೆ ಅವಕಾಶ ನೀಡಲಿದೆ ಎಂದು ಹೇಳಿದರು.


ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶಗಳ ಸೃಷ್ಟಿಗೆ, ಕಾರ್ಮಿಕರ ಮೇಲೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡಗಳನ್ನು ಕಡಿಮೆ ಮಾಡಲು, ಕಾರ್ಮಿಕರ ಜೀವನವನ್ನು ಉತ್ತಮಪಡಿಸಲು ವಾರಕ್ಕೆ 5 ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ ಕೆಲಸದ ಅವಧಿ ನಿಗದಿಪಡಿಸಲು ಕಾಯ್ದೆಗೆ ತಿದ್ದುಪಡಿ ಮಾಡಬೇಕೆಂದು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು. ಪ್ರತಿಭಟನೆಯಲ್ಲಿ ಪುಟ್ಟರಾಜು, ಟಿ.ಸಿ.ನಿಂಗರಾಜು, ಎಸ್.ಪ್ರಕಾಶ್, ಯೋಗೇಶ್ ನಾಯಕ್, ಎಂ.ಎನ್.ರವಿ, ಎಸ್.ಮಹದೇವ, ಮಹದೇವಸ್ವಾಮಿ, ಮಣಿಕಂಠ, ಸ್ವಾಮಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net