ಶೆಟ್ಟರಿಗೆ ಸಚಿವ ಸ್ಥಾನ ‘ಗ್ಯಾರಂಟಿ’

21raju4
Published on

ಚಾಮರಾಜನಗರ: ಕಾಂಗ್ರೆಸ್ ಸರ್ಕಾರದಲ್ಲಿ ಈ ಬಾರಿ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ‘ಗ್ಯಾರಂಟಿ’ ಇದೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ‘ಮಂತ್ರಿಭಾಗ್ಯ’ ಲಭಿಸುತ್ತದೆ ಎನ್ನುವ ವಿಶ್ವಾಸ ದುಪ್ಪಟ್ಟಾಗಿದೆ.

ನಾಲ್ಕು ಬಾರಿ ಗೆದ್ದಿರುವ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಮಂತ್ರಿ ಭಾಗ್ಯ ದೊರೆಯುತ್ತದೆ. ಉಪ್ಪಾರ ಸಮಾಜದ ಏಕೈಕ ಶಾಸಕ ಎನ್ನುವ ಕಾರಣವೂ ಇದಕ್ಕೆ ಮುಖ್ಯ ಕಾರಣ. ಸಚಿವ ಸ್ಥಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಭರವಸೆ ಸಿಕ್ಕಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಶನಿವಾರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜತೆಗೆ 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಎರಡನೇ ಹಂತದಲ್ಲಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ. ಈ ಕುರಿತು ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸತತವಾಗಿ ನಾಲ್ಕನೇ ಬಾರಿ ಆಯ್ಕೆಯಾಗಿರುವ ಅತ್ಯಂತ ಹಿರಿಯ ಶಾಸಕನಾಗಿದ್ದು, ಜಿಲ್ಲೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ನನಗೆ ಮಂತ್ರಿ ಸ್ಥಾನ ಗ್ಯಾರಂಟಿಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಚ್ಚಿನ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ನನಗೆ ಸಚಿವ ಸ್ಥಾನದ ಭರವಸೆ ನೀಡಿದ್ದಾರೆ. ಯಾವುದೇ ಲಾಬಿ ಮಾಡುವ ವ್ಯಕ್ತಿ ನಾನಲ್ಲ. ನಮ್ಮ ನಾಯಕರ ಮೇಲೆ ನೂರಕ್ಕೆ ಇನ್ನೂರಷ್ಟು ವಿಶ್ವಾಸವಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ವರ್ಗ ಹಾಗೂ ಹಿರಿತನದ ಕೋಟಾದಲ್ಲಿ ಮಂತ್ರಿ ಸಿಗಲಿದೆ ಎಂದರು.

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿದ್ದೆ. ಅವರು ಸಹ ನನಗೆ ಮಂತ್ರಿ ಸ್ಥಾನ ಕೊಡಿಸುವಲ್ಲಿ ಉತ್ಸಾಹಕರಾಗಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿಗಳನ್ನು ನೀಡಲು ತಾತ್ವಿಕ ಒಪ್ಪಿಗೆ ಪಡೆದುಕೊಂಡಿದೆ. ಜೂನ್ ತಿಂಗಳಿಂದಲೇ ಎಲ್ಲವೂ ಕಾರ್ಯರೂಪಕ್ಕೆ ಬರಲಿವೆ. ಹೀಗಾಗಿ ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಜಿಲ್ಲೆಯ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ಮುಖ್ಯಮಂತ್ರಿಗಳು ನೀಡಲಿದ್ದಾರೆ. ಮೂವರು ಶಾಸಕರನ್ನು ಕೊಟ್ಟಿರುವ ಚಾ.ನಗರ ಜಿಲ್ಲೆಯ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ ಎಂದು ತಿಳಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ಶಂಭಪ್ಪ, ಆಯುಬ್ ಖಾನ್, ಎಎಚ್‌ಎನ್ ಖಾನ್, ಪಿ. ಶೇಖರಪ್ಪ ಇತರರು ಇದ್ದರು.

ವಿಶೇಷ ಅನುದಾನ ತರಲಿದ್ದೇನೆ:
ಚಾಮರಾಜನಗರ: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸರ್ಕಾರದಿಂದ ವಿಶೇಷ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ದಿಪಡಿಸುವುದಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ರಚನೆಯಾದ ಬಳಿಕ ಸುದ್ದಿಗೋಷ್ಠಿ ಕರೆದು 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ. ಕಳೆದ ಸಲ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದರು. ಅಂತೆಯೆ, ಈ ಬಾರಿಯೂ ಕಾಂಗ್ರೆಸ್ ಸರ್ಕಾರ ನೀಡಿರುವ ಎಲ್ಲ ಭರವಸೆಗಳನ್ನೂ ಈಡೇರಿಸಲಿದೆ ಎಂದರು.

ಇದೇ ವೇಳೆ ಸಿ.ಪುಟ್ಟರಂಗಶೆಟ್ಟಿ ಅವರನ್ನು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಾಗಲವಾಡಿ ಶಿವಸ್ವಾಮಿ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ಮರಿಯಾಲದ ಹುಂಡಿಕುಮಾರ್, ಮುತ್ತಿಗೆ ದೊರೆ, ಶಂಭಪ್ಪ, ಶೇಷಣ್ಣ, ಎಸ್.ಎಂ.ಸಿದ್ದರಾಜು, ಬಸವಣ್ಣ, ನಗರಸಭಾ ಮಾಜಿ ಸದಸ್ಯ ಮಲ್ಲು, ಉಡಿಗಾಲ ಮಹದೇವು, ಸರಗೂರುಮೋಳೆ ರಾಜು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಲಿಂಗರಾಜು, ಶಿವಕುಮಾರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net