

ಚಾಮರಾಜನಗರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ಬೇರೆ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಂಡು ರಾಜ್ಯದ 224 ಕ್ಷೇತ್ರಗಳಲ್ಲಿ ಸಮಾಜವಾದಿ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚರ್ಚೆಯಲ್ಲಿ ತೊಡಗಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಲಿದ್ದೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಜಿ.ಎಂ.ಗಾಡ್ಕರ್ ತಿಳಿಸಿದರು.
ಚಾಮರಾಜನಗರ ಜಿಲ್ಲೆಯ 4, ಮೈಸೂರಿನ 11 ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಅಭ್ಯರ್ಥಿಗಳನ್ನು ಚುನಾಚಣೆಗೆ ಸ್ಪರ್ಧಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ಬೇರೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ಮಾಹಿತಿ ನೀಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ದೇಶದಲ್ಲಿ 75 ವರ್ಷಗಳ ಆಡಳಿತ ನಡೆಸಿದ ಬಿಜೆಪಿ, ಕಾಂಗ್ರೆಸ್ ಪಕ್ಷದವರು ಜನ ವಿರೋಧಿ ಆಡಳಿತವನ್ನು ನಡೆಸುತ್ತಿದ್ದಾರೆ. ಅಸಮಾನತೆ, ಜಾತೀಯತೆ, ಭ್ರಷ್ಟಾಚಾರ, ಕೋಮುವಾದಿ ದೌರ್ಜನ್ಯಗಳು ಇಂದಿಗೂ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಆದ್ದರಿಂದ ಕೋಮುವಾದಿ, ಜಾತಿವಾದಿ, ಭಾರಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಹಾಗೂ ಪ್ರಗತಿಪರ ಸಮುದಾಯಗಳ ಪ್ರಾಮಾಣಿಕ, ಕಳಂಕ, ಭ್ರಷ್ಟಾಚಾರ ರಹಿತ, ಸಾಮಾಜಿಕ ನ್ಯಾಯ ಪರವಾಗಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ಮಹದೇವಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಂಗಸ್ವಾಮಿ, ಜಿಲ್ಲಾಧ್ಯಕ್ಷ ಕೆ.ಪರಶಿವಮೂರ್ತಿ, ಮುಖಂಡರಾದ ಚಂದ್ರಶೇಖರ್, ಚಿನ್ನಸ್ವಾಮಿ, ಚಾ.ಹ. ರಾಮು ಇದ್ದರು.