

ಚಾಮರಾಜನಗರ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನವನ್ನು ಸ್ಫೂರ್ತಿಯನ್ನಾಗಿಸಿಕೊಂಡು ಸಾಧನೆ ಮಾಡಬೇಕೆಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ 160 ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಾನಗಳಲ್ಲೇ ಶ್ರೇಷ್ಠ ದಾನ ವಿದ್ಯಾದಾನ. ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಪಾಲಕರು ಖುಷಿ ಪಡುವಂತೆ ನಡೆದುಕೊಳ್ಳಿ. ಜೀವನದಲ್ಲಿ ಸಾಧನೆ ಮಾಡಲು ವಿವೇಕಾನಂದರನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಿ ಎಂದರು.
ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜ್ಞಾನ ಹೊಂದಬೇಕು ಎಂದು ಹೇಳಿದರು.
ಇದೇ ವೇಳೆ ಜೈ ಭುವನೇಶ್ವರಿ ಕನ್ನಡ ಯುವ ಅಧ್ಯಕ್ಷ ಜಿ.ಬಂಗಾರು ಪ್ರಶಸ್ತಿ ಪತ್ರ ವಿತರಣೆ ಮಾಡಿ ಮಾತನಾಡಿದರು. ಸಮಾಜ ಸೇವಕ ಡಾ.ಪರಮೇಶ್ವರಪ್ಪ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಕಾಲೇಜಿನ ಪ್ರಾಂಶುಪಾಲ. ಎಂ.ಸುಮತಿ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಗೌರವಾಧ್ಯಕ್ಷ ಮಹಮದ್ ಅಸ್ಗರ್ ಮುನ್ನ, ಉಪನ್ಯಾಸಕರಾದ ಮಂಜುನಾಥ್ ಪಾರ್ವತಿ. ಪ್ರಭಾವತಿ. ಹೇಮಂತ್ ಕುಮಾರ್ ಇತರರು ಇದ್ದರು.