

ರಾಯಚೂರು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದಿಂದ ರೈತ ಹೋರಾಟಗಾರ ಚನ್ನಬಸವಪ್ಪ ಬೆಟ್ಟದೂರು ಅವರ ನೆನಪಿನ ದಿನಾಚರಣೆ ಹಾಗೂ ಅಧ್ಯಯನ ಶಿಬಿರ ಕಾರ್ಯಕ್ರಮವನ್ನು ಜೂ.13ರಂದು ಬೆಳಗ್ಗೆ 10.30ಕ್ಕೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆಂದು ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಕಾರ್ಯಕ್ರಮದ ಉದ್ಘಾಟನೆಯನ್ನು ಹೈದ್ರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ನೆರವೇರಿಸಲಿದ್ದಾರೆ. ಸದಸ್ಯತ್ವ ನೊಂದಣಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಅಮರಣ್ಣ ಗುಡಿ ವಹಿಸಿಕೊಳ್ಳಲಿದ್ದು, ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಚನ್ನಬಸವಪ್ಪ ಅವರ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅನೇಕ ಹೋರಾಟಗಾರರು, ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಉದ್ಘಾಟನೆ ನಂತರ ತುಂಗಭದ್ರ ಎಡದಂಡೆ ಕಾಲುವೆ ಹಾಗೂ ನಾರಾಯಣಪುರ ಬಲದಂಡೆ ನಾಲೆಯ ಸಮಸ್ಯೆಗಳು ಮತ್ತು ಪರಿಹಾರದ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, ವಿಷಯವನ್ನು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಮಂಡಿಸಲಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಸಂಘದ ರಾಜ್ಯ ಮಹಿಳಾ ಅಧ್ಯಕ್ಷೆ ನಾಗರತ್ನಮ್ಮ ಪಾಟೀಲ್ ವಹಿಸಿಕೊಳ್ಳಲಿದ್ದಾರೆ ಎಂದರು.
ಐಕ್ಯ ಹೋರಾಟದ ಅನಿವಾರ್ಯತೆ ಕುರಿತು ಎರಡನೇ ಗೋಷ್ಠಿ ನಡೆಯಲಿದ್ದು, ವಿಷಯವನ್ನು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಎನ್.ಡಿ ವಸಂತಕುಮಾರ ವಹಿಸಿಕೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಉಪಾಧ್ಯಕ್ಷ ಬೂದಯ್ಯಸ್ವ್ವಾಮಿ, ರಾಜ್ಯ ಉಪಾಧ್ಯಕ್ಷ ದೊಡ್ಡ ಬಸವನಗೌಡ ಬಲ್ಲಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗಾರೆಡ್ಡಿ ಪಾಟೀಲ್ ಇದ್ದರು.