ಚೈತ್ರಾ ಕುಂದಾಪುರ ವಿರುದ್ಧ ಚಾರ್ಜ್​ಶೀಟ್: 800 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ ಸಿಸಿಬಿ

Chaitra Kundapur
Published on

ಬೆಂಗಳೂರು: ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ. ಪಡೆದು ವಂಚಿಸಿದ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಿರುದ್ಧದ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ, ನ್ಯಾಯಾಲಯಕ್ಕೆ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.

ನಗರದ 3ನೇ ಎಸಿಎಂಎಂ ಕೋರ್ಟ್​ಗೆ ಬುಧವಾರ ಸಿಸಿಬಿ ಪೊಲೀಸರು ಚಾರ್ಜ್ ಶೀಶೀಟ್ ಸಲ್ಲಿಸಿದ್ದಾರೆ. ಎಂಎಲ್​ಎ ಟಿಕೆಟ್ ಡೀಲ್ ಪ್ರಕರಣದ ಸಂಬಂಧ ಸುಮಾರು 68 ಸಾಕ್ಷ್ಯಗಳನ್ನು ಕಲೆ ಹಾಕಿದೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿರುವ ಚಾರ್ಜ್​ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಸಂಬಂಧ ಮೊದಲು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಕೊಟ್ಯಂತರ ರೂ. ವಂಚನೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಸಿಸಿಬಿ ಘಟಕದ ಮಹಿಳಾ ಸಂರಕ್ಷಣಾ ದಳದ ಎಸಿಪಿ ನೇತೃತ್ವದಲ್ಲಿ ತನಿಖೆ ಕೈಗೊಂಡ ಅಧಿಕಾರಿಗಳು ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಪ್ರಕರಣದ ಪ್ರಮುಖ ಕಿಂಗ್​ಪಿನ್ ಚೈತ್ರಾ ಹಾಗೂ ಉಳಿದ ಆರೋಪಿಗಳು ವಂಚನೆ ಪ್ರಕರಣದಲ್ಲಿ ತಮ್ಮ ಪಾತ್ರಗಳ ಬಗ್ಗೆ ತನಿಖಾಧಿಕಾರಿ ಎದುರು ಮಾಹಿತಿ ನೀಡಿ ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ತಪ್ಪೊಪ್ಪಿಗೆಯನ್ನು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪಿಗಳು ಉದ್ಯಮಿಯಿಂದ ಎಲ್ಲೆಲ್ಲಿ ಹಣ ಪಡೆದಿದ್ದರು. ಏನೆಲ್ಲ ಖರೀದಿಸಿದ್ದರು. ಎಲ್ಲೆಲ್ಲಿ ಹೂಡಿಕೆ ಮಾಡಿದ್ದರು ಎಂಬುದರ ಬಗ್ಗೆ ಸೂಕ್ತ ಪುರಾವೆಗಳನ್ನು ಸಲ್ಲಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ದೊಡ್ಡವರ ಹೆಸರು ಹೊರಗೆ ಬರಲೇ ಇಲ್ಲ: ಆರೋಪಿ ಚೈತ್ರಾ ಬಂಧನಕ್ಕೊಳಗಾದ ಸಂದರ್ಭದಲ್ಲಿ ಈ ಪ್ರಕರಣದಲ್ಲಿ ದೊಡ್ಡವರ ಹೆಸರು ಹೊರಬಲಿದೆ ಎಂದು ಹೇಳಿ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಳು. ಆದರೆ ಸಿಸಿಬಿ ಪೊಲೀಸರ ತನಿಖೆ ವೇಳೆ ಈ ಪ್ರಕರಣದ ಪ್ರಮುಖ ಕಿಂಗ್​ಪಿನ್ ಚೈತ್ರಾಳೇ ಎಂಬುದು ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?: ಹಿಂದು ಕಾರ್ಯಕರ್ತೆ ಚೈತ್ರಾ ಹಾಗೂ ಆಕೆಯ ಗ್ಯಾಂಗ್ ಕಳೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉಡುಪಿ ಮೂಲದ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ 5 ಕೋಟಿ ರೂ. ಹಣ ಪಡೆದು ವಂಚಿಸಿತ್ತು. ಈ ಸಂಬಂಧ ಗೋವಿಂದಬಾಬು ಪೂಜಾರಿ ಅವರು ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ವಿಜಯನಗರ ಜಿಲ್ಲೆ ಹಿರೇಹಡಗಲಿ ಅಭಿನವ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ, ಶ್ರೀಕಾಂತ್ ನಾಯಕ್, ಗಗನ್ ಕಡೂರು, ಧನರಾಜ್, ರಮೇಶ್, ಪ್ರಸಾದ್, ಪ್ರಜ್ವಲ್ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ 4.11 ಕೋಟಿ ರೂ. ಜಪ್ತಿ ಮಾಡಲಾಗಿತ್ತು.

ಹಾಲಶ್ರೀಗೆ ಜಾಮೀನು ಮಂಜೂರು

ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಸಂಬಂಧ ಜಾಮೀನು ಕೋರಿ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯ ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಅರ್ಜಿ ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿದಾರರ ವಿರುದ್ಧದ ತನಿಖಾಧಿಕಾರಿಗಳು ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಆ ಸಂದರ್ಭ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ತನಿಖೆ ಮುಕ್ತಾಯಗೊಂಡಿದೆ. ಹಾಗಾಗಿ ಅರ್ಜಿದಾರರು ತನಿಖೆ ಎದುರಿಸುವ ಅಗತ್ಯವಿಲ್ಲ. ಅರ್ಜಿದಾರರು ಪಡೆದಿದ್ದಾರೆ ಎನ್ನಲಾದ ಹಣವನ್ನು ತನಿಖಾಧಿಕಾರಿಗಳು ಈಗಾಗಲೇ ಜಪ್ತಿ ಮಾಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ವಶಕ್ಕೆ ನೀಡಿದ್ದಾರೆ.

ಏಳಕ್ಕಿಂತ ಕಡಿಮೆ ವರ್ಷ ಶಿಕ್ಷೆ ವಿಧಿಸಬಹುದಾದ ಆರೋಪಗಳು ಮಾತ್ರ ಅರ್ಜಿದಾರರ ಮೇಲಿದೆ. ಅವರ ಮೇಲಿನ ಆರೋಪಗಳ ಸತ್ಯಾಸತ್ಯತೆಯು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಯಲ್ಲಿ ತಿಳಿಯಬೇಕಾಗಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಲು ಇದು ಅರ್ಹ ಪ್ರಕರಣವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಆಲಿಸಿದ ನ್ಯಾಯಪೀಠ, ಹಾಲಶ್ರೀ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net