

ಮೈಸೂರು: ಜನ, ಜಾನುವಾರುಗಳು ಕುಡಿಯುವ ನೀರನ್ನು ನಿಯಮಿತವಾಗಿ ಪರೀಕ್ಷೆ ಮಾಡಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕುಡಿಯುವ ನೀರಿಗೆ ಕೊರತೆ ಇಲ್ಲ. ಆದರೆ ಜನರಿಗೆ ಕುಡಿಯಲು ಯೋಗ್ಯವಾದ ನೀರನ್ನು ನೀಡಬೇಕು. ಆದ್ದರಿಂದ ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಪರೀಕ್ಷೆ ಮಾಡಿ, ಕುಡಿಯಲು ಯೋಗ್ಯವೇ ಎನ್ನುವುದನ್ನು ಪರೀಕ್ಷಿಸಬೇಕು ಎಂದು ಸೂಚನೆ ನೀಡಿದರು.
ಮಳೆಯಿಂದಾದ ಪ್ರಾಣ ಹಾನಿ, ಜಾನುವಾರು, ಮನೆ ಹಾಗೂ ಬೆಳೆ ಹಾನಿಗಳಿಗೆ ಎನ್‌ಡಿಆರ್‌ಎಫ್ ಸೂಚನೆಗಳ ಪ್ರಕಾರ ಪರಿಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದರು.
ಕಂದಾಯ ಇಲಾಖೆಯ ಸೇವೆಗಳು ಸಕಾಲದಲ್ಲಿ ಜನರಿಗೆ ದೊರೆಯಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಿಎಸ್‌ಆರ್ ಅನುದಾನವನ್ನು ಬಳಕೆ ಮಾಡಿ ಮೂಲಸೌಕರ್ಯ ಕಲ್ಪಿಸಲು ಮುಂದಾಗುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಮಾಡಿದ್ದು, ಶಾಲೆ ಬಿಟ್ಟವರನ್ನು ಮರಳಿ ಶಾಲೆಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಡಿಡಿಪಿಐಗೆ ಸೂಚನೆ ನೀಡಿದರು.
ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಉತ್ತಮ ಚಿಕಿತ್ಸೆ ದೊರೆಯಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜನರಲ್ಲಿ ಅರಿವು ಮೂಡಿಸಬೇಕು. ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗೆ ನಿಯಮಿತವಾಗಿ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು.
ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡು, ಜಾನುವಾರುಗಳಿಗೆ ಮೇವು ಕೊರತೆ ಆಗದಂತೆ ಮೇವು ಕಿಟ್‌ಗಳನ್ನು ವಿತರಣೆ ಮಾಡಿ, ಮೇವು ಬೆಳವಣಿಗೆಗೆ ಉತ್ತೇಜನ ನೀಡುವಂತೆ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಿಎಸ್‌ಆರ್ ಅನುದಾನಕ್ಕೆ ಜಿಲ್ಲೆಯಲ್ಲಿರುವ ಕಂಪನಿಗಳ ಪ್ರತಿನಿಧಿಗಳ ಸಭೆ ನಡೆಸಲಾಗಿದೆ. ವಿವಿಧ ಶಾಲೆಗಳ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಆಗುತ್ತಿದ್ದು, ಇವುಗಳ ಗುಣಮಟ್ಟವನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಬೆಳೆ ಪರಿಹಾರಕ್ಕೆ ಕ್ರಮ
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆ ಶೇ.42 ರಷ್ಟು ಹೆಚ್ಚಾಗಿದೆ. ಕಬಿನಿ ಮತ್ತು ಕೆಆರ್‌ಎಸ್‌ನಿಂದ ಹೆಚ್ಚುವರಿ ನೀರು ಬಿಟ್ಟಿದ್ದರಿಂದ ತಿ.ನರಸೀಪುರ ಹಾಗೂ ನಂಜನಗೂಡು ತಾಲೂಕಿನ ಕೆಲವು ಗ್ರಾಮಗಳ ಬೆಳೆಗಳು ನಾಶ ಆಗಿವೆ. ಇದಕ್ಕೆ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ 75 ಮನೆಗಳು ಮಳೆಯಿಂದ ಪೂರ್ಣ ಪ್ರಮಾಣದ ಹಾನಿ ಆಗಿದೆ. ಇದಕ್ಕೆ 1.20 ಲಕ್ಷ ಪರಿಹಾರ ನೀಡಲಾಗುತ್ತಿದೆ. 83 ಮನೆಗಳು ಭಾಗಶಹ ಹಾನಿಯಾಗಿದ್ದು, 50 ಸಾವಿರ ಪರಿಹಾರ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಬಾಳೆ ಮತ್ತು ತಂಬಾಕು ಬೆಳೆ ಹೆಚ್ಚಿನ ಹಾನಿಯಾಗಿದೆ. ರೈತರ ಜಮೀನುಗಳಿಗೆ ಆಧಾರ್ ಸಿಡಿಂಗ್ ಕಾರ್ಯ ನಡೆಯುತ್ತಿದೆ. ಶೇ.70ರಷ್ಟು ಆಧಾರ್ ಸೀಡಿಂಗ್ ಆಗಿದೆ. ಉಳಿದ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.