ಬರ ಅಧ್ಯಯನ ವರದಿ ಸಲ್ಲಿಸಲು ಮುಖ್ಯಮಂತ್ರಿಗಳಿಂದ ಸೂಚನೆ

new porgitr
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಸಂಪ್ರದಾಯದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿಕೆಶಿವಕುಮಾರ ಗಂಗಾಪೂಜೆ ನೇರವೇರಿಸಿ ಜಲದಿಗೆ ಬಾಗಿನ ಅರ್ಪಿಸಿದರು. ನಂತರ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
Published on

ಮೈಸೂರು: ರಾಜ್ಯದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿ ಅಧ್ಯಯನ ಮಾಡಿ, ನ. 15ರೊಳಗೆ ವರದಿ ನೀಡುವಂತೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬರದ ಕುರಿತು ಅಧ್ಯಯನ ಮಾಡಿ ವರದಿ ನೀಡುವಂತೆ ಈಗಾಗಲೇ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೆಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕುಡಿಯುವ ನೀರು, ಉದ್ಯೋಗ ನೀಡುವುದು ಇದ್ಯಾವುದೂ ನಿಂತಿಲ್ಲ ಎಂದರು.
ಕೇಂದ್ರಕ್ಕೆ ಪತ್ರ ಬರೆದ ಮೇಲೆ ನರೇಗಾ ಯೋಜನೆಯಡಿ ನೆನ್ನೆಯಷ್ಟೇ 600 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ. ಬಿಡುಗಡೆ ಮಾಡುವಂತೆ ಕೋರಿದ್ದೇವೆ. ರಾಜ್ಯದ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ದೆಹಲಿಗೆ ಕಳುಹಿಸಲಾಗಿತ್ತು. ಆದರೆ ನಮ್ಮ ಸಚಿವರ ಭೇಟಿಗೆ ಕೇಂದ್ರದ ಮಂತ್ರಿಗಳು ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಯೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬರುವ ಪರಿಸ್ಥಿತಿ ಬಂದಿದೆ. ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಗೆ ಸಾಕ್ಷಿ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಕಾಳಜಿ ಇದ್ದರೆ ಹಣ ಬಿಡುಗಡೆ ಮಾಡಿಸಲಿ:
ರಾಜ್ಯದ ಬಿಜೆಪಿ ನಾಯಕರಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಅನುದಾನ ಬಿಡುಗಡೆ ಮಾಡಿಸಲಿ. ಅದು ಬಿಟ್ಟು ರಾಜ್ಯದಲ್ಲಿ ಪ್ರವಾಸ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ ಎನ್ನುವುದು ಹಾಸ್ಯಾಸ್ಪದ ಎಂದು ಸಿದ್ದರಾಮಯ್ಯ ಟೀಕಿಸಿದರು.
ಇಲ್ಲಿಯತನಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿ ಬಗ್ಗೆ ಆಶ್ವಾಸನೆ ಕೊಡುತ್ತಿದ್ದಾರೆ. ನಾವು ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಬಡವರಿಗೆ ನೀಡುವ ಗ್ಯಾರಂಟಿ ಯೋಜನೆ, ಟೀಕಿಸುವ ವಿಚಾರವಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net