

ಮೈಸೂರು: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ದಿನದಲ್ಲಿ ಉಲ್ಟಾ ಹೊಡೆದಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಸಂಬಂಧ ಸರ್ಕಾರದಲ್ಲಿ ಚರ್ಚೆ ಆಗಬೇಕು. ಆದೇಶವನ್ನು ಇನ್ನೂ ವಾಪಸ್ ಪಡೆದಿಲ್ಲ. ಯಾರೋ ಒಬ್ಬರು ಪ್ರಶ್ನೆ ಮಾಡಿದ್ದರು. ಅದಕ್ಕೆ ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಉತ್ತರ ನೀಡಿದ್ದೆ. ಆದರೆ, ಸರ್ಕಾರ ಈ ಬಗ್ಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ’ ಎಂದು ಸ್ಪಷ್ಟಪಡಿಸಿದರು.
ಶುಕ್ರವಾರ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪ್ರತಿಯೊಬ್ಬರೂ ತಮ್ಮ ಇಚ್ಛೆಯಂತೆ ಉಡುಗೆ ಧರಿಸಲು ಹಾಗೂ ಆಹಾರ ಸೇವಿಸಲು ಸಂಪೂರ್ಣ ಸ್ವಾತಂತ್ರ್ಯವಿದ್ದು, ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ’ ಎಂದಿದ್ದರು.
‘ಬಿಜೆಪಿಯವರು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಗಡ್ಡ ಬಿಟ್ಟವರನ್ನು, ಟೋಪಿ ಧರಿಸಿದವರನ್ನು ಬಿಜೆಪಿಯವರು ಹತ್ತಿರಕ್ಕೆ ಬಿಟ್ಟುಕೊಳ್ಳುವುದಿಲ್ಲ. ಇವರಿಂದ ಹೇಗೆ ಸಬ್ ಕಾ ವಿಕಾಸ್ ಸಾಧ್ಯವಿದೆ? ಅವರವರ ಇಚ್ಛೆಯಂತೆ ಆಹಾರ ಸೇವಿಸಲು ಹಾಗೂ ಉಡುಗೆ ತೊಡಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಹೀಗಾಗಿ, ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ನೀವ್ಯಾರೂ ಆ ಬಗ್ಗೆ ಚಿಂತೆ ಪಡಬೇಕಾಗಿಲ್ಲ ಎಂದು ಮುಸ್ಲಿಂ ಸಮುದಾಯದವರಿಗೆ ಅಭಯ ನೀಡಿದ್ದರು.
ಆದರೆ, ಈಗ ಒಂದೇ ದಿನದಲ್ಲಿ ತಮ್ಮ ಹೇಳಿಕೆ ಬದಲಾಯಿಸಿದ್ದಾರೆ.