

ಚಿಕ್ಕಬಳ್ಳಾಪುರ: ಪ್ರತಿಯೊಬ್ಬರು ಇತರರ ಹಕ್ಕುಗಳಿಗೆ ಚ್ಯುತಿ ತರದಂತೆ ಜೀವನ ನಡೆಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ಸಲಹೆ ನೀಡಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೋಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ ಶುಕ್ರವಾರ ಕೈಗೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನವನ್ನು ಉದ್ಘಾಟಿಸಿ ಮಾತನಾಡಿದರು.
ನಾಗರಿಕ ಸಮಾಜದ ಸ್ವತಂತ್ರ ಬದುಕಿನಿಂದ ಪ್ರಜಾಪ್ರಭುತ್ವದ ಜೀವಂತಿಕೆಯನ್ನು ಕಾಣಬಹುದು. ಈ ಹಿನ್ನೆಲೆಯಲ್ಲಿ ಪ್ರತಿ ಪ್ರಜೆಯೂ ಸಂವಿಧಾನ ನೀಡಿರುವ ಹಕ್ಕುಗಳನ್ನು ಅರಿತುಕೊಂಡು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದರು.
ಯಾವುದೇ ಜಾತಿ ಮತ, ಧರ್ಮ, ಜನಾಂಗ, ಬಣ್ಣ ಮತ್ತು ಲಿಂಗ ತಾರತಮ್ಯವಿಲ್ಲದೇ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ಹಕ್ಕುಗಳನ್ನು ನೀಡುತ್ತಿದೆ. ಹಾಗೆಯೇ ಯಾರು ವಂಚಿತರಾಗದಂತೆ ನೋಡಿಕೊಳ್ಳುತ್ತದೆ, ಆಹಾರ, ವಸತಿ ಮತ್ತು ಬಟ್ಟೆ ಮುಖ್ಯವಾಗಿ ಬೇಕು. ಇವುಗಳಿಲ್ಲದೇ ಜೀವನ ನಡೆಸುವುದನ್ನು ಊಹಿಸಲೂ ಅಸಾಧ್ಯ. ಈ ಮೂಲ ಸವಲತ್ತುಗಳನ್ನು ವಂಚಿತರನ್ನಾಗಿಸುವುದು ಶಿಕ್ಷಾರ್ಹ ಅಪರಾಧ. ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಜಿಪಂ ಸಿಇಒ ಪಿ.ಶಿವಶಂಕರ್ ಎಚ್ಚರಿಸಿದರು.
ನಾಗರಿಕ ಸಮಾಜದ ಸ್ವಾತಂತ್ರ್ಯಕ್ಕಾಗಿ ಘೋಷಿಸಲಾದ ಮಾನವ ಹಕ್ಕುಗಳನ್ನು 1948ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ಪ್ರತಿವರ್ಷ ಡಿ.10 ರಂದು ವಿಶ್ವ ಮಾನವ ಹಕ್ಕುಗಳ ದಿನ ಆಚರಿಸಲಾಗುತ್ತಿದ್ದು, ಇದರ ಉದ್ದೇಶ ಮಾನವ ಹಕ್ಕುಗಳ ರಕ್ಷಣೆ ಮತ್ತು ಜಾಗೃತಿ ಮೂಡಿಸುವುದಾಗಿದೆ ಎಂದು ವಕೀಲ ಜಿ.ವಿ.ವಿಶ್ವನಾಥ್ ತಿಳಿಸಿದರು. ಮಾನವ ಹಕ್ಕುಗಳ ರಕ್ಷಣಾ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ಕೃಷ್ಣಪ್ಪ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ಕೆ.ವಿ.ಶಿಕ್ಷಣ ಕಾಲೇಜು ಪ್ರಾಂಶುಪಾಲ ಡಾ.ಪಿ.ಎನ್.ಶೇಖರ್, ಮಾನವ ಹಕ್ಕುಗಳ ಹೋರಾಟಗಾರ ಬಿ.ಲಕ್ಷ್ಮೀನಾರಾಯಣ ಮತ್ತಿತರರು ಇದ್ದರು.
ಅರಿವು ಅಗತ್ಯ: ಮಾನವ ಹಕ್ಕುಗಳ ಉಲ್ಲಂಘನೆಯಾದಾಗ ನ್ಯಾಯಾಲಯದಿಂದ ನ್ಯಾಯ ಪಡೆಯಬಹುದು. ವಿಶ್ವಕ್ಕೆ ಮಾದರಿಯಾಗಿರುವ ಭಾರತೀಯ ನ್ಯಾಯಾಂಗ ವ್ಯವಸ್ಥೆಯು ಜನರ ಹಕ್ಕುಗಳ ಸಂರಕ್ಷಣೆಯಲ್ಲಿ ಹೆಸರುವಾಸಿಯಾಗಿದೆ. ಪ್ರತಿಯೊಬ್ಬರು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿದಾಗ ಯಾರ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ. ಈ ನಿಟ್ಟಿನಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ, ಕಾನೂನು ನಿಯಮ, ಪ್ರಜೆಗಳ ಹಕ್ಕುಗಳು ಮತ್ತು ಕರ್ತವ್ಯಗಳ ಬಗೆಗಿನ ಅರಿವು ಅಗತ್ಯವಿದೆ ಎಂದು ವಕೀಲ ಜಿ.ವಿ.ವಿಶ್ವನಾಥ್ ಅಭಿಪ್ರಾಯಪಟ್ಟರು.
ಕಿರು ಹೊತ್ತಗೆ ಬಿಡುಗಡೆ: ಮಾನವ ಹಕ್ಕುಗಳ ರಕ್ಷಣೆ ಕುರಿತಾದ ಜಾಗೃತಿಯುಳ್ಳ ಕಿರುಹೊತ್ತಗೆ ಹಾಗೂ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಸಮಾಜದಲ್ಲಿ ಹಕ್ಕುಗಳ ಸಂರಕ್ಷಣೆಯ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಿಸುವುದರ ಬಗ್ಗೆ ನ್ಯಾಯಾಧೀಶರು, ವಿದ್ಯಾರ್ಥಿಗಳು, ಅಧಿಕಾರಿಗಳು ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು.