ಬೇಸಿಗೆ ಎದುರಿಸಲು ಸಜ್ಜಾಗಿ

12CBP5
Published on

ಚಿಕ್ಕಬಳ್ಳಾಪುರ: ಬೇಸಿಗೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಲಿದ್ದು, ಈಗಲೇ ಎಚ್ಚೆತ್ತುಕೊಂಡು ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ಬಾರಿಯ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಆದ್ದರಿಂದ ಈಗಲೇ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಸಮರ್ಪಕವಾಗಿ ನೀರು ಪೂರೈಸುವಂತಾಗಲು ಕ್ರಿಯಾ ಯೋಜನೆ ರೂಪಿಸಬೇಕು. ಕೂಡಲೇ ಪ್ರಸ್ತಾವನೆ ಸಲ್ಲಿಸಿದರೆ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ 75 ಗ್ರಾಮಗಳನ್ನು ಗುರುತಿಸಲಾಗಿದೆ. 1 ಗ್ರಾಮಕ್ಕೆ ಪ್ರತಿ ದಿನ 3 ಟ್ಯಾಂಕರ್‌ನಂತೆ ನೀರು ಪೂರೈಸಲಾಗುತ್ತಿದೆ. ಇದರ ಜತೆಗೆ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯಾತ್ಮಕ ಗ್ರಾಮಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ನಿರ್ದೇಶಕ ಶಿವಕುಮಾರ್ ಮಾಹಿತಿ ನೀಡಿದರು.

ಕೃಷಿ ಹೊಂಡಗಳಲ್ಲಿ ಮೀನುಗಳನ್ನು ಸಾಕಲು ರೈತರನ್ನು ಪ್ರೋತ್ಸಾಹಿಸಬೇಕು. ನಿಯಮಾನುಸಾರ ಫಲಾನುಭವಿಗಳಿಗೆ 5 ಸಾವಿರ ರೂ. ಪ್ರೋತ್ಸಾಹಧನ ನೀಡಬೇಕು ಎಂದು ಮೀನುಗಾರಿಕೆ ಇಲಾಖೆಗೆ ಜಿಪಂ ಸಿಇಒ ಬಿ.ೌಜಿಯಾ ತರನ್ನುಮ್ ಸೂಚಿಸಿದರು.

ಜಿಪಂ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಮುಖ್ಯ ಯೋಜನಾಧಿಕಾರಿ ಮಾಧವ್‌ರಾಮ್ ಇತರರಿದ್ದರು.

ನೀರಿನ ಘಟಕಗಳ ದುರಸ್ತಿ : ಗ್ರಾಮಗಳಲ್ಲಿ ಸ್ಥಾಪಿಸಿರುವ ಕುಡಿಯುವ ನೀರಿನ ಶುದ್ಧೀಕರಣದ ಘಟಕಗಳ ದುರಸ್ತಿ ಮತ್ತು ಸಮರ್ಪಕ ನಿರ್ವಹಣೆಗೆ ಗ್ರಾಮೀಣ ಮತ್ತು ಕುಡಿಯುವ ನೀರು, ನೈರ್ಮಲ್ಯ ಇಲಾಖೆ, ಪಂಚಾಯತ್ ರಾಜ್ ಇಲಾಖೆಗೆ ಸಭೆ ಸೂಚಿಸಿತು.

ಪ್ರಸ್ತುತ 52 ಶುದ್ಧ ಕುಡಿಯುವ ನೀರಿನ ಘಟಕಗಳು ತಾಂತ್ರಿಕ ಸಮಸ್ಯೆಯಿಂದ ಕಾರ್ಯನಿರ್ವಹಿಸುತ್ತಿಲ್ಲ. ಇವುಗಳ ದುರಸ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ಘಟಕಗಳ ಸ್ಥಗಿತದಿಂದ ಇಲಾಖೆಗೂ ನಷ್ಟವಾಗುವ ಜತೆಗೆ ಜನರೂ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.

ಉದ್ಯಾನ ಅಭಿವೃದ್ಧಿಪಡಿಸಿ : ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಆವರಣ ಸೇರಿ ವಿವಿಧ ಪ್ರದೇಶಗಳಲ್ಲಿ ಗಿಡಗಳನ್ನು ಬೆಳೆಸಿ ಉದ್ಯಾನದ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ಅಲಂಕಾರಿಕ, ಹಣ್ಣಿನ ಗಿಡಗಳಿಂದ ಹಸಿರಿನ ವಾತಾವರಣ ನಿರ್ಮಾಣವಾಗುತ್ತದೆ. ಜತೆಗೆ ಪರಿಸರ ಸಂರಕ್ಷಣೆ ಹಾಗೂ ಅಂತರ್ಜಲ ಸುಧಾರಣೆಗೂ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ತೋಟಗಾರಿಕೆ, ಸಾಮಾಜಿಕ ಅರಣ್ಯ ಇಲಾಖೆ ಮೂಲಕ ವಿವಿಧ ಇಲಾಖೆಗಳು ಉದ್ಯಾನ ನಿರ್ಮಿಸಬೇಕು ಎಂದು ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚಿಸಿದರು.

ಜಿಲ್ಲೆಗೆ ರಾಜ್ಯದಲ್ಲಿ 2ನೇ ಸ್ಥಾನ: ಆಯುಷ್ಮಾನ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದುಕೊಂಡಿದೆ, ಇದುವರೆಗೂ 1,70,000 ಕಾರ್ಡ್ ವಿತರಿಸಲಾಗಿದೆ. ಈಗಾಗಲೇ ಯೋಜನೆಯ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಿಂದಲೂ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಬಿ.ಎಂ.ಯೋಗೀಶ್‌ಗೌಡ ಗಮನ ಸೆಳೆದರು.

ಕೃಷಿ ಮೇಳಕ್ಕೆ ಸಿದ್ಧತೆ: ಜಿಲ್ಲಾ ಕೇಂದ್ರದಲ್ಲಿ ೆ.15, 16 ರಂದು ನಡೆಯಲಿರುವ ಕೃಷಿ ಮೇಳಕ್ಕೆ ವಿವಿಧ ಇಲಾಖೆ ಸಹಕಾರದೊಂದಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ವಿವಿಧ ಮಳಿಗೆಗಳ ಸ್ಥಾಪನೆ, ಫಲಪುಷ್ಪಗಳಲ್ಲಿ ತಯಾರಿಸಿದ ನಾನಾ ಆಕೃತಿಗಳ ಪ್ರದರ್ಶನ, ರೈತರಿಗೆ ಉಪಯೋಗವಾಗುವ ಪರಿಕರ ಮತ್ತು ಕೃಷಿ ಉತ್ಪನ್ನಗಳ ಮಾಹಿತಿ ಕೇಂದ್ರ, ಮನರಂಜನಾತ್ಮಕ ಕಾರ್ಯಕ್ರಮ ಮತ್ತು ದೇಶಿಯ ಸ್ಪರ್ಧೆಗಳು ಗಮನ ಸೆಳೆಯಲಿವೆ ಎಂದು ಜಂಟಿ ಕೃಷಿ ನಿರ್ದೇಶಕಿ ಎಲ್.ರೂಪಾ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net