ದ್ವೇಷ ಭಾಷಣಗಳ ಆಧಾರದ ಮೇಲೆ ಪಕ್ಷ ಕಟ್ಟುತ್ತಿದೆ ಬಿಜೆಪಿ

ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಹಾಗೂ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮುರೊಳ್ಳಿ
ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಹಾಗೂ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮುರೊಳ್ಳಿ
Published on

ದ್ವೇಷ ಭಾಷಣಗಳ ಆಧಾರದ ಮೇಲೆ ಸಂಘಟನೆಯನ್ನು ಕಟ್ಟುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಹಾಗೂ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮುರೊಳ್ಳಿ ಆರೋಪಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಇತ್ತೀಚೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಸಾರ್ವಜನಿಕ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬೆದರಿಕೆ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳು ಮತ್ತು ಯುವಜನರ ಹೋರಾಟವನ್ನು ಬೆಂಬಲಿಸಿದ ನಟ ಪ್ರಕಾಶ್ ರೈ ವಿರುದ್ಧವೂ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಟೀಕಿಸಿದರು.

ಅದೇ ರೀತಿ ಚಿಕ್ಕಮಗಳೂರು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿದ್ಯಾರ್ಥಿ ಮತ್ತು ಯುವಜನರ ಹೋರಾಟದ ಬಗ್ಗೆ ಅನುಮಾನ ವ್ಯಕ್ತಪಡಿಸಿ, "ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ" ಎಂದು ಪ್ರಶ್ನಿಸಿರುವುದು ಖಂಡನೀಯ ಎಂದು ಹೇಳಿದರು.

ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಮತ್ತು ಯುವಜನರ ಚಳವಳಿ ಜಾತಿ, ಮತ, ಧರ್ಮ ಹಾಗೂ ಪ್ರಾಂತ್ಯದ ಭೇದವಿಲ್ಲದೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಡೆದ ಹೋರಾಟವಾಗಿತ್ತು. ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಾಗದೆ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಸಿ.ಟಿ. ರವಿ ನೀಡಿರುವ ಹೇಳಿಕೆಗಳು ಅವರದೇ ಪಕ್ಷದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೂ ಮಾಡಿದ ಅವಮಾನವಾಗಿದೆ ಎಂದು ಲೇವಡಿ ಮಾಡಿದರು.

ಸಮಾಜದಲ್ಲಿ ದ್ವೇಷದ ವಾತಾವರಣ ಸೃಷ್ಟಿಸುವ ಹೇಳಿಕೆಗಳನ್ನು ನೀಡುವ ಬದಲು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿ.ಟಿ. ರವಿ ಅವರಿಗೆ ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಚಂದ್ರು, ಮಶ್ವೇರಪ್ಪ, ಸೈಯದ್ ಅನಿಫ್, ಮಂಜುನಾಥ್, ಪ್ರಶಾಂತ್ ಹಾಗೂ ಗಂಗಾಧರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net