ಕಳಸ: ಇಲ್ಲಿನ ಗಣಪತಿಕಟ್ಟೆಯ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಶಾಲೆ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಹಸಿರು ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಪ್ರಾಚಾರ್ಯೆ ಸುನೀತಾ ಬಡಿಗೇರ ಗಿಡ ನೆಟ್ಟು ಮಾತನಾಡಿ, ಪ್ರಕೃತಿ ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು. ನಾವು ನೆಡುವ ಪ್ರತಿ ಗಿಡವೂ ನಮ್ಮ ಭವಿಷ್ಯದ ಉಸಿರು. ವಿದ್ಯಾರ್ಥಿಗಳು ಗಿಡಗಳನ್ನು ನೆಡುವ ಜತೆಗೆ ಅವುಗಳನ್ನು ಪೋಷಿಸಿ ಬೆಳೆಸುವ ಜವಾಬ್ದಾರಿ ತೆಗೆದುಕೊಳ್ಳಬೇಕು. ಯುವ ಪೀಳಿಗೆಯಲ್ಲಿ ಪರಿಸರ ಪ್ರಜ್ಞೆ ಮೂಡಿದಾಗ ಮಾತ್ರ ಸ್ವಚ್ಛ ಹಾಗೂ ಹಸಿರು ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿಗಳು ಶಾಲಾ ಆವರಣದ ಸುತ್ತಮುತ್ತ ವಿವಿಧ ಜಾತಿಯ ನೆರಳು ನೀಡುವ ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು, ಅವುಗಳಿಗೆ ನಿತ್ಯ ನೀರುಣಿಸಿ ಪೋಷಿಸುವುದಾಗಿ ಪ್ರತಿಜ್ಞೆ ಮಾಡಿದರು. ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.