ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪತ್ರ ಬರೆದ ಎಂ.ಕೆ.ಪ್ರಾಣೇಶ್‌

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್
ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್
Published on

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಲಯದ ತೀರ್ಪಿಗೆ ತಲೆಬಾಗುತ್ತೇನೆ
ಚಿಕ್ಕಮಗಳೂರು:

ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೆಯ ಜನರನ್ನುದ್ದೇಶಿಸಿ ಭಾವನಾತ್ಮಕ ಪತ್ರ ಬರೆದಿದ್ದಾರೆ. ನ್ಯಾಯಾಲಯದ ತೀರ್ಪಿಗೆ ಗೌರವ ಸೂಚಿಸಿ ತಮ್ಮ ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

1997ರಿಂದಲೂ ದೇಶಾದ್ಯಂತ ನಡೆದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುತ್ತಾ ಬಂದಿದ್ದಾರೆ. ತಾವು ಯಾವುದೇ ಚುನಾವಣಾ ಅಕ್ರಮ ಎಸಗಿಲ್ಲ. ತಮ್ಮ ಗೆಲುವಿನ ಅಂತರ ಕಡಿಮೆ ಇದ್ದ ಕಾರಣ ಪ್ರತಿಸ್ಪರ್ಧಿ ಅಭ್ಯರ್ಥಿ ನ್ಯಾಯಾಲಯದ ಮೊರೆ ಹೋದ ಪರಿಣಾಮ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಉಪಸಭಾಪತಿಯಾಗಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಪಕ್ಷಾತೀತವಾಗಿ ಕಾರ್ಯನಿರ್ವಹಿಸಿದ್ದು, ಭ್ರಷ್ಟಾಚಾರ ಹಾಗೂ ದ್ವೇಷ ರಾಜಕಾರಣದಿಂದ ದೂರವಿದ್ದು ಸಾರ್ವಜನಿಕ ಸೇವೆಗೆ ಆದ್ಯತೆ ನೀಡಿದ್ದೇನೆ ಎಂದು ಪ್ರಾಣೇಶ್ ಹೇಳಿದ್ದಾರೆ.
ತಮ್ಮ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಕಾರ್ಯಕರ್ತರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ಅವರು ಪತ್ರದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.
ಅಲ್ಲದೆ ತಮ್ಮ ಅವಧಿಯಲ್ಲಿ ಸಹಕಾರ ನೀಡಿದ ಹಿಂದಿನ ಹಾಗೂ ಹಾಲಿ ಸರ್ಕಾರದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ವಿಧಾನ ಪರಿಷತ್ ಸಭಾಪತಿ, ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೂ ಧನ್ಯವಾದ ಅರ್ಪಿಸಿದ್ದಾರೆ.
ಈ ತೀರ್ಪಿನಿಂದ ಯಾರೂ ಎದೆಗುಂದಬೇಕಿಲ್ಲ. ನಾನು ಅಧಿಕಾರವನ್ನು ಕಳೆದುಕೊಂಡಿರಬಹುದು. ಆದರೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರೊಂದಿಗೆ ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಯುತವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ನೂತನವಾಗಿ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿರುವ ಗಾಯತ್ರಿ ಶಾಂತೇಗೌಡ ಅವರಿಗೆ ಶುಭಾಶಯ ಕೋರಿರುವ ಎಂ.ಕೆ. ಪ್ರಾಣೇಶ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮುಂದುವರಿಸಲಿ ಎಂದು ಹಾರೈಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net