ನಗರ ವ್ಯಾಪ್ತಿಯ ಪ್ರತಿಯೊಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಂಟ್ರೋಲ್ ರೂಂಗಳನ್ನು ದಿನದ ೨೪ ಗಂಟೆಯೂ ತೆರೆಯುವುದರ ಜೊತೆಗೆ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಯನ್ನು ನೇಮಕ ಮಾಡಿ, ತಹಸೀಲ್ದಾರ್ ಹಾಗೂ ತಾಲೂಕು ಕಚೇರಿಯೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು. ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿರಂತರವಾಗಿ ಮಾಡಬೇಕು. ಒಂದೊಮ್ಮೆ ಕಲುಷಿತ ನೀರು ಕಂಡು ಬಂದಲ್ಲಿ ಪುನಶ್ಚೇತನಗೊಳಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿಗಳು ಸಹ ನೀರಿನ ಗುಣಮಟ್ಟ ಪರೀಕ್ಷೆಯನ್ನು ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಮಾಡಿರುವುದರ ಬಗ್ಗೆ ಕೂಡಲೇ ವರದಿ ನೀಡುವಂತೆ ತಿಳಿಸಿದ ಅವರು, ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಳೆಗಾಲದಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಟಾಸ್ಕ್‌ಫೋರ್ಸ್ ತಂಡಗಳನ್ನು ರಚಿಸಿ ಸಮಸ್ಯೆಗಳುಂಟಾದಲ್ಲಿ ಕೂಡಲೇ ಸ್ಪಂದಿಸಬೇಕು. ತುರ್ತು ದೂರವಾಣಿ ಸಂಪರ್ಕ ಸ್ಥಾಪಿಸಿ ಈ ಕುರಿತು ಪ್ರಚಾರಪಡಿಸಬೇಕು. ಹೆದ್ದಾರಿಗಳಿಗೆ ಅಡ್ಡಲಾಗಿ ಬಿದ್ದಂತಹ ಮರಗಳನ್ನು ತುರ್ತು ಕಾರ್ಯಾಚರಣೆ ಕೈಗೊಂಡು ತೆರವುಗೊಳಿಸುವ ಕಾರ್ಯವನ್ನು ಮಾಡಬೇಕು ಎಂದು ಸೂಚಿಸಿದರು.
ನಗರ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಸ್ಥಳೀಯ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ರಸ್ತೆಯ ಮೇಲೆ ಬೀಳುವ ಮರಗಳನ್ನು ತಕ್ಷಣ ತೆರವುಗೊಳಿಸಲು ಸನ್ನದ್ಧರಾಗಿರಬೇಕು. ಗಾಳಿ-ಮಳೆಯಿಂದ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಲ್ಲಿ ತಕ್ಷಣವೇ ಪುನರ್ ಸಂಪರ್ಕ ಕಲ್ಪಿಸುವ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಔಷಧ, ಚುಚ್ಚುಮದ್ದುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಡೆಂಘೆ ಮಲೇರಿಯಾ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳನ್ನು ಗುರುತಿಸಿ ದುರಸ್ತಿಗೆ ಕ್ರಮ ವಹಿಸಬೇಕು. ಮಳೆಗಾಲದ ತುರ್ತು ಸಂದರ್ಭಗಳಲ್ಲಿ ಅಗತ್ಯವಿದ್ದಾಗ ಕಾಳಜಿ ಕೇಂದ್ರಗಳನ್ನು ತೆರೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈ ಹಿಂದೆ ಹೆಚ್ಚಿನ ಪ್ರವಾಹವಾಗಿರುವ ಸ್ಥಳಗಳನ್ನು ಗುರುತಿಸಿ ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗ್ನಿಶಾಮಕ ದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷತಾ ಉಪಕರಣಗಳೊಂದಿಗೆ ಸನ್ನದ್ಧವಾಗಿರಬೇಕು. ಗೃಹರಕ್ಷಕ ದಳದ ಸಿಬ್ಬಂದಿ ಸಹ ತುರ್ತು ಸೇವೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಮಳೆಗಾಲದಲ್ಲಿ ಗುಡುಗು, ಸಿಡಿಲು ಸಂದರ್ಭದಲ್ಲಿ ಹವಾಮಾನ ಇಲಾಖೆ ನೀಡುವ ಮುನ್ನೆಚ್ಚರಿಕೆಯ ಕ್ರಮಗಳನ್ನು ಪಾಲಿಸುವುದರೊಂದಿಗೆ ಯಾವುದೇ ಮಾನವ ಹಾಗೂ ಪ್ರಾಣಿಗಳ ಜೀವಹಾನಿಯಾಗದಂತೆ ನೋಡಿಕೊಳ್ಳಬೇಕು. ಗುಡುಗು, ಸಿಡಿಲಿನ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಶ್ವತ್ಥ್‌ಬಾಬು, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಮಂಗಳಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ದಿವಾಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಮೆಸ್ಕಾಂನ ಅಧೀಕ್ಷಕ ಅಭಿಯಂತರ ಮಂಜುನಾಥ್, ಎಲ್ಲಾ ತಾಲೂಕುಗಳ ತಹಸೀಲ್ದಾರರು, ತಾಪಂಗಳ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.