ವಿದ್ಯಾರ್ಥಿಗಳ ಜ್ಞಾನ ವೃದ್ಧಿಸುವ ಒಲಿಂಪಿಯಾಡ್ ಪರೀಕ್ಷೆ

ಮೆಣಸೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಮೆಣಸೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
Published on
ಶೃಂಗೇರಿ: ಒಲಿಂಪಿಯಾಡ್ ಪರೀಕ್ಷೆಗಳು ವಿದ್ಯಾರ್ಥಿಗಳ ತಾರ್ಕಿಕ ಚಿಂತನೆ, ವಿಶ್ಲೇಷಣಾತ್ಮಕ ಸಾಮರ್ಥ್ಯ ಹಾಗೂ ಆಳವಾದ ಜ್ಞಾನವನ್ನು ಪರೀಕ್ಷಿಸುತ್ತದೆ. ಗಣಿತ, ವಿಜ್ಞಾನ, ಆಂಗ್ಲ ಹಾಗೂ ಸಾಮಾನ್ಯ ಜ್ಞಾನವನ್ನು ಒಳಗೊಂಡಿದ್ದು ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಸುರೇಶ್ ಹೇಳಿದರು.
ಮೆಣಸೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ದೇಶದ ಭವಿಷ್ಯದ ರೂವಾರಿಗಳು.ಅವರಲ್ಲಿ ಆತ್ಮವಿಶ್ವಾಸ, ಮಾನಸಿಕ ಸದೃಢತೆ ಇರಬೇಕು. ಸವಾಲುಗಳನ್ನು ಸ್ವೀಕರಿಸುವ ಮನೋಭಾವ ಹೊರ ಹೊಮ್ಮಬೇಕು. ಈ ನಿಟ್ಟಿನಲ್ಲಿ ಒಲಿಂಪಿಯಾಡ್ ಪರೀಕ್ಷೆಗಳು ಸಮಸ್ಯೆ ಬಿಡಿಸುವ ಕೌಶಲ್ಯ ಹೆಚ್ಚಿಸಿ ಶೃಕ್ಷಣಿಕ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಕ್ಷಮತೆ ಸುಧಾರಿಸಲು ಮತ್ತು ಅವರ ಜ್ಞಾನದ ಪ್ರಖರತೆ ಹೆಚ್ಚಿಸಲು ಕೇಂದ್ರ ಸರ್ಕಾರ ರೂಪಿಸಿದ ಯೋಜನೆ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಎಸ್‌ಸಿ ಕೇಂದ್ರಗಳಲ್ಲಿ ಮೂರನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪರೀಕ್ಷೆ ಬರೆಸಲಾಗಿದ್ದು 580 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳು ಗ್ರಾಮೀಣ ವಿದ್ಯಾರ್ಥಿಗಳನ್ನೂ ತಲುಪಬೇಕು ಎಂಬುದು ನಮ್ಮ ಆಶಯ. ತಾಲೂಕಿನ ಶೇ.90 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.
ತಾಲೂಕು ನೋಡಲ್ ಅಧಿಕಾರಿಗಳಾದ ಅರುಣ್‌ಕುಮಾರ್, ವಲಯ ಮೇಲ್ವಿಚಾರಕ ಮೋಹನ್, ಸೇವಾ ಪ್ರತಿನಿಧಿಗಳಾದ ನಾಗರತ್ನ, ಗೌರಮ್ಮ, ಸಂತೋಷ್, ಆಶಾ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net