ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ಕಬ್ಬಳ್ಳಿ ಗೇಟ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಕಬ್ಬಳ್ಳಿ, ಗುಂಡಾಪುರ, ಸಿದ್ದಾಪುರ ಮಂಗೇನಹಳ್ಳಿ, ವಿದ್ಯಾವರ ಹಾಗೂ ಗೊಲ್ಲರಹಟ್ಟಿ ಗ್ರಾಮಸ್ಥರು ಸಮರ್ಪಕವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿದರು. ಚೇತನ್, ಚಂದ್ರಶೇಖರ್, ದಿಲೀಪ್, ಭುವನೇಶ್, ಪ್ರಣಾಮ್ ಮತ್ತಿತರರಿದ್ದರು.
ಚಿಕ್ಕಮಗಳೂರು:ಸಖರಾಯಪಟ್ಟಣ ಸಮೀಪದ ಗ್ರಾಮಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ಕಬ್ಬಳ್ಳಿ ಗೇಟ್ ಬಳಿ ರಸ್ತೆ ಬದಿಯಲ್ಲೇ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಕಬ್ಬಳ್ಳಿ, ಗುಂಡಾಪುರ, ಸಿದ್ದಾಪುರ ಮಂಗೇನಹಳ್ಳಿ, ವಿದ್ಯಾವರ ಹಾಗೂ ಗೊಲ್ಲರಹಟ್ಟಿ ಗ್ರಾಮಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಪ್ರತಿದಿನ ಸುಮಾರು ಆರು ಕಿಮೀ ನಡೆದು ಕಾಲೇಜಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳು ಈ ಹಿಂದೆ ಬಸ್ ಸಂಚಾರ ಆರಂಭಿಸುವುದಾಗಿ ಭರವಸೆ ನೀಡಿದ್ದರೂ, ಅದನ್ನು ಈಡೇರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಸಖರಾಯಪಟ್ಟಣ-ಬಾಣಾವರ ಸಂಪರ್ಕಿಸುವ ಮುಖ್ಯ ರಸ್ತೆಯ ಸಂಚಾರ ತಡೆದು ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‌ಐ ಶಂಭುಲಿAಗನಗೌಡ ಅವರ ಮನವೊಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಕಡೂರು ವೃತ್ತ ನಿರೀಕ್ಷಕ ರಫೀಕ್ ಆಗಮಿಸಿ ರಸ್ತೆ ತಡೆಯಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಸ್ಪಂದಿಸಿದ ಪ್ರತಿಭಟನಾಕಾರರು ರಸ್ತೆ ತಡೆ ಕೈಬಿಟ್ಟು, ರಸ್ತೆ ಬದಿಯಲ್ಲಿ ಕುಳಿತು ಪ್ರತಿಭಟನೆ ಮುಂದುವರಿಸಿದರು.
ಬೆಳಗ್ಗೆಯಿAದಲೇ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಪರಿಣಾಮ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋಗಬೇಕಾಯಿತು.
ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ಚೇತನ್ ಮಾತನಾಡಿ, ಆ. ೧೮ರಂದು ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಆ. ೨೦ರಿಂದಲೇ ಈ ಭಾಗದಲ್ಲಿ ಬಸ್ ಸಂಚಾರ ಆರಂಭಿಸುವುದಾಗಿ ಭರವಸೆ ನೀಡಿದ್ದರು. ಇದರಿಂದ ಗ್ರಾಮಸ್ಥರು ಸಂತಸಗೊAಡು ಅಧಿಕಾರಿಗಳನ್ನು ಅಭಿನಂದಿಸಿದ್ದರು. ಆದರೆ ದಿನಗಳು ಕಳೆದರೂ ಬಸ್ ಸಂಚಾರ ಆರಂಭಿಸದೆ ಸಾರಿಗೆ ಇಲಾಖೆ ಅಧಿಕಾರಿಗಳು ಮಾತು ತಪ್ಪಿದ್ದಾರೆ. ನೀಡಿದ ಭರವಸೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ಪ್ರತಿಭಟನೆಯ ಸ್ವರೂಪವನ್ನು ತೀವ್ರಗೊಳಿಸುವುದು ಅನಿವಾರ್ಯವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ್, ದಿಲೀಪ್, ಭುವನೇಶ್, ಪ್ರಣಾಮ್, ವಿಶ್ವನಾಥ್ ಮತ್ತಿತರರು ಭಾಗವಹಿಸಿದ್ದರು.