ನಗರದ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು ಜೂನ್ 30ರಿಂದ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಮನೆಗೆ ತೆರಳಿ ಮತದಾರರಿಗೆ ಎಣಿಕೆ (ಎನ್ಯುಮರೇಷನ್) ಫಾರಂಗಳನ್ನು ವಿತರಿಸುತ್ತಿದ್ದಾರೆ. ಆದರೆ 2002ರ ಮತಪಟ್ಟಿಯಲ್ಲಿ ಹೆಸರು ಪತ್ತೆ ಮಾಡುವುದು, ಅರ್ಜಿ ಭರ್ತಿ ಮಾಡುವುದು ಸೇರಿದಂತೆ ಹಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಜನರಲ್ಲಿ ಆತಂಕ ಮತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.
ಈ ಸಮಸ್ಯೆಗಳನ್ನು ಮನಗಂಡು ನಾಗರಿಕ ಮತಕಾವಲು ಸಮಿತಿಯು ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಎಸ್‌ಐಆರ್ ಸಹಾಯವಾಣಿ (ಹೆಲ್ಪ್ ಡೆಸ್ಕ್) ಕೇಂದ್ರಗಳನ್ನು ಸ್ಥಾಪಿಸಿ, ಶಾಶ್ವತ ನಿವಾಸಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆಯಲು ಬೂತ್ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಹಾಗೂ ಜಿಲ್ಲಾಧಿಕಾರಿಗಳು ಈ ವ್ಯವಸ್ಥೆಯ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವಂತೆ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದರು.
ಆದರೆ ಸರ್ಕಾರ ಅಧಿಸೂಚನೆ ಹೊರಡಿಸಿ 15 ದಿನಗಳು ಕಳೆದಿದ್ದರೂ ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬೂತ್ ಮಟ್ಟದ ಸಹಾಯ ಕೇಂದ್ರಗಳು ಸಮರ್ಪಕವಾಗಿ ಕಾರ್ಯಾರಂಭ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಡಳಿತವು ತಕ್ಷಣವೇ ಜಿಲ್ಲೆಯಾದ್ಯಂತ ಎಸ್‌ಐಆರ್ ಸಹಾಯವಾಣಿ (ಹೆಲ್ಪ್ ಡೆಸ್ಕ್) ಕೇಂದ್ರಗಳನ್ನು ಆರಂಭಿಸಿ, ಶಾಶ್ವತ ನಿವಾಸಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ತ್ವರಿತವಾಗಿ ಒದಗಿಸಲು ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಬೂತ್ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಯಾವುದೇ ಮತದಾರರು ದಾಖಲೆಗಳ ಕೊರತೆಯಿಂದ ಸಂಕಷ್ಟಕ್ಕೀಡಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.