ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ (water problem)

: ತರೀಕೆರೆ ತಾಪಂನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು. ಎಚ್.ಎಸ್.ಕೀರ್ತನಾ, ಎನ್.ವಿ.ನಟೇಶ್, ವಿನಾಯಕ್ ಸಾಗರ್, ಎಂ.ಕೆ.ವಿಜಯಕುಮಾರ್, ಡಾ. ಆರ್.ದೇವೇಂದ್ರಪ್ಪ ಇತರರಿದ್ದರು.
: ತರೀಕೆರೆ ತಾಪಂನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು. ಎಚ್.ಎಸ್.ಕೀರ್ತನಾ, ಎನ್.ವಿ.ನಟೇಶ್, ವಿನಾಯಕ್ ಸಾಗರ್, ಎಂ.ಕೆ.ವಿಜಯಕುಮಾರ್, ಡಾ. ಆರ್.ದೇವೇಂದ್ರಪ್ಪ ಇತರರಿದ್ದರು.
Published on
 ತರೀಕೆರೆ: ಅಜ್ಜಂಪುರ-ತರೀಕೆರೆ ತಾಲೂಕು ಒಳಗೊಂಡಿರುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಪಿಡಿಒಗಳಿಗೆ ಸೂಚಿಸಿದರು.
ತಾಪಂನಲ್ಲಿ ಕುಡಿಯುವ ನೀರು ಮತ್ತು ಬರ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ನೀರಿನ ಮೂಲಗಳ ಸಮರ್ಪಕ ನಿರ್ವಹಣೆ, ನೀರಿನ ಲಭ್ಯತೆ ನಿರಂತರವಾಗಿ ಮೇಲ್ವಿಚಾರಣೆ ಮಾಡುವುದಲ್ಲದೆ, ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆಗೆ ರೂಪುರೇಷೆ ತಯಾರಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜನರಿಗೆ ಕುಡಿಯುವ ನೀರು ಪೂರೈಸುವ ಹೊಣೆಗಾರಿಕೆ ಜತೆ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಎಚ್ಚರವಹಿಸಿ ದಾಸ್ತಾನು ಮಾಡಿಕೊಳ್ಳಲು ಬೇಕಾದ ವ್ಯವಸ್ಥೆ ಆಗಬೇಕು. ಪ್ರಕೃತಿ ವಿಕೋಪಗಳಿಂದ ಆಗುವ ಆರ್ಥಿಕ ತೊಂದರೆ ತಪ್ಪಿಸಲು ರೈತರಿಗೆ ಬೆಳೆವಿಮೆ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸುವುದಲ್ಲದೆ ನೋಂದಣಿಗೆ ಉತ್ತೇಜಿಸಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಕೊರತೆ ಹಿನ್ನೆಲೆಯಲ್ಲಿ ಅಜ್ಜಂಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸಿಎಂಗೆ ಮನವಿ ಮಾಡಲಾಗಿದೆ. ಕ್ಷೇತ್ರದಲ್ಲಿ ಸದ್ಯಕ್ಕಿರುವ ಬರದ ನೈಜ ವಸ್ತುಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ ಸರ್ಕಾರಕ್ಕೆ ತಕ್ಷಣ ವರದಿ ಸಲ್ಲಿಸಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬರ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನ ಜಾನುವಾರು, ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಬರ ನಿರ್ವಹಣೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
 ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಉಪ ವಿಭಾಗಾಧಿಕಾರಿ ಎನ್.ವಿ.ನಟೇಶ್, ತಹಸೀಲ್ದಾರರಾದ ವಿನಾಯಕ್ ಸಾಗರ್, ಎಸ್.ಜೆ.ರಶ್ಮಿ, ತಾಪಂ ಇಒಗಳಾದ ಎಂ.ಕೆ.ವಿಜಯಕುಮಾರ್, ಡಾ. ಆರ್.ದೇವೇಂದ್ರಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಚಿದಾನಂದಪ್ಪ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net