ಇದೀಗಷ್ಟೇ ಮುಂಗಾರು ಮಳೆಗಾಲ ಆರಂಭಗೊಂಡಿದ್ದು, ಇನ್ನೂ ಮೂರು ತಿಂಗಳ ಕಾಲ ಮಳೆ ಆರ್ಭಟಿಸುವ ಸಂದರ್ಭದಲ್ಲಿ ಚಾರ್ಮಾಡಿ ಘಾಟ್ ಸೇರಿದಂತೆ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಎರಡು ದಿನಗಳ ಹಿಂದಷ್ಟೇ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಚಾರ್ಮಾಡಿ ಘಾಟ್ ನ ಸಂಭವನೀಯ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಸಣ್ಣ ಪ್ರಮಾಣದಲ್ಲಿ ಕಲ್ಲುಗಳು ಜರಿದಿರುವುದು ಆತಂಕಕ್ಕೆ ಕಾರಣವಾಗಿದೆ.