ತರೀಕೆರೆ: ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಜಿಲ್ಲೆಗೆ ಅನ್ಯಾಯ ಮಾಡಬಾರದು. ಇಂದಿರಾ ಗಾಂಧಿಗೆ ರಾಜಕೀಯ ಮರುಜನ್ಮ ನೀಡಿದ ಪುಣ್ಯಭೂಮಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
ಕಾಂಗ್ರೆಸ್ ಸೇವಾದಳದ ತಾಲೂಕು ಅಧ್ಯಕ್ಷ ಟಿ.ಎನ್.ಜಗದೀಶ್ ಮಾತನಾಡಿ, ಜಿಲ್ಲೆ ಕೆಲವು ವರ್ಷಗಳಿಂದ ಸಚಿವ ಸ್ಥಾನದಿಂದ ವಂಚಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾರುಪತ್ಯ ಸಾಧಿಸಿದ್ದು, ಈ ದಿಸೆಯಲ್ಲಿ ಹೈಕಮಾಂಡ್ ಸ್ಪಂದಿಸಿ ಹಿರಿಮೆ ಹೊಂದಿರುವ ಕಾಫಿ ನಾಡಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಎರಡು ಬಾರಿ ಗೆಲುವು ಸಾಧಿಸಿರುವ ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಆಗ್ರಹಿಸಿದರು.