

ಪಂಚನಹಳ್ಳಿ: ಮಕ್ಕಳ ಸಮಗ್ರ ಬೆಳವಣಿಗೆಗೆ ಪೋಷಕಾಂಶಯುಕ್ತ ಆಹಾರ ನೀಡಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಗುಜ್ಜೇನಹಳ್ಳಿ ತಿಪ್ಪೇಶಪ್ಪ ಹೇಳಿದರು.
ಸೋಮವಾರ ಸಿಂಗಟಗೆರೆ ಸಮೀಪದ ಎಸ್.ಡಿ.ಕೊಪ್ಪಲು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ಬಡತನದ ಕಾರಣಕ್ಕೆ ಮಕ್ಕಳಿಗೆ ಸರಿಯಾದ ಪೋಷಕಾಂಶ ದೊರೆಯುತ್ತಿರಲಿಲ್ಲ. ಹಾಗಾಗಿ ಮಕ್ಕಳು ಆರೋಗ್ಯವಂತರಾಗಿ ಬೆಳೆಯುತ್ತಿರಲಿಲ್ಲ. ಇದೀಗ ರಾಜ್ಯ ಮತ್ತು ಕೇಂದ್ರ ಸರ್ಕಾರ ಅನೇಕ ಯೋಜನೆಗಳ ಮೂಲಕ ಮಕ್ಕಳು ಮತ್ತು ಬಾಣಂತಿಯರಿಗೆ ಪೋಷಕಾಂಶಯುಕ್ತ ಆಹಾರ ನೀಡುತ್ತಿದೆ. ಇದರಿಂದ ದೈಹಿಕವಾಗಿ ಮಾತ್ರವಲ್ಲದೆ ಮಕ್ಕಳ ಮಾನಸಿಕ ಸಾಮರ್ಥ್ಯ ಹೆಚ್ಚಲು ಸಹಕಾರಿಯಾಗುತ್ತಿದೆ ಎಂದರು.
ಯಾವೊಬ್ಬ ನಾಗರಿಕನು ಹಸಿವಿನಿಂದ ಬಳಲಬಾರದು ಎನ್ನುವ ಕಾರಣಕ್ಕೆ ಸರ್ಕಾರ ಅನ್ನಭಾಗ್ಯ ಯೋಜನೆ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದೆ. ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ ಎಂದರು.
ಮೇಲ್ವಿಚಾರಕಿ ಬಿ.ಎಸ್.ಕವಿತಾ ಮಾತನಾಡಿ, ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಮಕ್ಕಳು ಮತ್ತು ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗವಾಗಬೇಕು. ಅಂಗನವಾಡಿಗಳಲ್ಲಿ ದೊರೆಯುವ ಸವಲತ್ತುಗಳು ಗರಿಷ್ಠ ಗುಣಮಟ್ಟದಿಂದ ಕೂಡಿರುತ್ತವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ಎಯುಸಿಟಿಯು ತಾಲೂಕು ಅಧ್ಯಕ್ಷೆ ಪಾರ್ವತಮ್ಮ ಮಾತನಾಡಿ, ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಗ್ರಾಪಂ ಮಾಜಿ ಸದಸ್ಯೆ ಕೆ.ಎನ್.ಸವಿತಾ, ಬಿ.ಪಿ.ಸುನಂದ, ಎಸ್.ಬಿ.ಕಾಟತಮ್ಮ, ಸುಶೀಲ, ಪವಿತ್ರಾ, ಗೀತಾದೇವಿ, ಕಾವ್ಯಾ, ವಿಎಸ್‌ಎಸ್‌ಎನ್ ನಿರ್ದೇಶಕ ಶಿವಕುಮಾರ್ ಭಾಗವಹಿಸಿದ್ದರು.