

ಕಾರವಾರ: ಸಮಾಜದಲ್ಲಿ ಮೌಲ್ಯಗಳ ಕುಸಿತದಿಂದಾಗಿ ಮಕ್ಕಳ ಮೇಲೆ ದೌರ್ಜನ್ಯ (Child abuse) ಪ್ರಕರಣಗಳು ಹೆಚ್ಚುತ್ತಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ತಿದ್ದುಪಡಿ -2023ರ ಜಾರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಕುರಿತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ಹಕ್ಕುಗಳ ರಕ್ಷಣಾ ನಿರ್ದೇಶನಾಲಯ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಮಕ್ಕಳ ರಕ್ಷಣೆಯ ಚಟುವಟಿಕೆಗಳು ಕುಟುಂಬಗಳಲ್ಲಿಯೇ ಆರಂಭವಾಗಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯು ಪ್ರತಿಯೊಂದು ಇಲಾಖೆಯ ಜವಾಬ್ದಾರಿಯಾಗಿದೆ. ಈ ಕುರಿತಂತೆ ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ರಚನೆಯಾಗಿರುವ ಸಮಿತಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು, ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಶೇ.70 ರಷ್ಟು ಮಕ್ಕಳಿಗೆ ಸುರಕ್ಷಿತ ಎಂದು ಕಂಡುಬರುವ ಸ್ಥಳಗಳಲ್ಲೇ ನಡೆಯುತ್ತವೆ. ಶಾಲೆಗಳಲ್ಲಿ, ಮನೆಗಳಲ್ಲಿ, ಅಪರಿಚಿತರಿಗಿಂತ ಪರಿಚಿತ ವ್ಯಕ್ತಿಗಳಿಂದಲೇ ಹೆಚ್ಚು ದೌರ್ಜನ್ಯ ನಡೆಯಲಿದ್ದು, ಹೆಣ್ಣು ಮಕ್ಕಳು ಮಾತ್ರವಲ್ಲದೇ ಗಂಡು ಮಕ್ಕಳ ಮೇಲೆಯೂ ನಡೆಯಲಿದ್ದು, ಇಂತಹ ಸಂದರ್ಭದಲ್ಲಿ ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಬೇಕು ಎಂದರು.
ಡಾ. ರಾಘವೇಂದ್ರ ಭಟ್ ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.